ನರಗುಂದ/ನವಲಗುಂದ, ಸೆ.20-ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಳೆದ 67 ದಿನಗಳಿಂದ ನಡೆಯುತ್ತಿರುವ ಹೋರಾಟಕ್ಕೆ ದಿನದಿಂದ ದಿನಕ್ಕೆ ವ್ಯಾಪಕ ಬೆಂಬಲ ಸಿಗುತ್ತಿದ್ದು, ಇಂದು ರಾಜ್ಯ ರೈತ ಸಂಘ, ಹಸಿರುಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ನಗರಕ್ಕೆ ಭೇಟಿ ನೀಡಿ ಹೋರಾಟಗಾರರಿಗೆ ಆತ್ಮಸ್ಥೈರ್ಯ ತುಂಬಿದರು.
ಈ ವೇಳೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಕಳಸಾ ಬಂಡೂರಿ ನಾಲಾ ಯೋಜನೆಯಿಂದ ಉತ್ತರ ಕರ್ನಾಟಕ ಭಾಗದ ರೈತರ ನೀರಾವರಿಗೆ ಅನುಕೂಲವಾಗುತ್ತದೆ. ಮಹದಾಯಿಯಿಂದ ನೀರು ಹರಿದು ಸಮುದ್ರಕ್ಕೆ ಸೇರುತ್ತಿದ್ದು, ಆ ನೀರನ್ನು ಮಲಪ್ರಭೆಗೆ ತಿರುವು ಮಾಡಿದರೆ 7.56 ಟಿಎಂಸಿ ನೀರು ಸಿಗುತ್ತದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಒತ್ತಡ ತರಬೇಕು ಎಂದು ಒತ್ತಾಯಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು, ಮಧ್ಯ ಪ್ರವೇಶಿಸಿ ಗೋವಾ ಹಾಗೂ ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕೆಂದರು. ಯೋಜನೆ ಅನುಷ್ಠಾನಗೊಳ್ಳುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ನವಲಗುಂದ ವರದಿ :ನವಲಗುಂದದಲ್ಲಿ ಸಹ ಹೋರಾಟ 48 ನೇ ದಿನಕ್ಕೆ ತಲುಪಿದ್ದು ಸರದಿಯಂತೆ ರೈತರು ವಿವಿಧ ಸಂಘಟನೆಗಳ ಮುಖಂಡರುಗಳು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.