ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಪಿಡಿಪಿ-ಬಿಜೆಪಿ ಮೈತ್ರಿಕೂಟ ಸರ್ಕಾರ ರಚನೆಯಾಗುತ್ತಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಕಣಿವೆ ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ.
ಯಾವುದೇ ಹೊಸ ಷರತ್ತುಗಳಿಲ್ಲದೆ ಬಿಜೆಪಿಯೊಂದಿಗೆ ಸರ್ಕಾರ ರಚನೆಗೆ ಪಿಡಿಪಿ ನಿರ್ಧರಿಸಿದ್ದು, ಈ ಸಂಬಂಧ ಇಂದು ನಡೆದ ಪಿಡಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೆಹಬೂಬಾ ಮುಫ್ತಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಮೆಹಬೂಬಾ ಮುಫ್ತಿ ಅವರು ಮಿತ್ರ ಪಕ್ಷ ಬಿಜೆಪಿ ಹಾಗೂ ರಾಜ್ಯಪಾಲರೊಂದಿಗೆ ಚರ್ಚಿಸಿ ಪ್ರಮಾಣವಚನ ಸ್ವೀಕರಿಸುವ ದಿನಾಂಕ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.
ಬಿಜೆಪಿಯೊಂದಿಗೆ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಪಿಡಿಯಲ್ಲಿ ಕೆಲವು ಗೊಂದಲಗಳಿದ್ದವು. ಆದರೆ ಇತ್ತೀಚಿಗೆ ಮೆಹಬೂಬಾ ಮುಫ್ತಿ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಎಲ್ಲಾ ಗೊಂದಲಗಳಿಗೂ ಪರಿಹಾರ ಕಂಡುಕೊಂಡಿದ್ದರು.
ಪಿಡಿಪಿ-ಬಿಜೆಪಿ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಮುಫ್ತಿ ಮೊಹಮ್ಮದ್ ಸಯೀದ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜನವರಿಯಲ್ಲಿ ನಿಧನರಾದರು. ಬಳಿಕ ಬಿಜೆಪಿ ಮೈತ್ರಿಕೂಟದ ಒಪ್ಪಂದಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದ ನೇತೃತ್ವ ವಹಿಸಿಕೊಳ್ಳಲು ಮೆಹಬೂಬಾ ಮುಫ್ತಿ ನಿರಾಕರಿಸಿದ್ದರು.