ಬೆಂಗಳೂರು, ಏ.19-ನೆತ್ತಿ ಸುಡುವ ಬಿರುಬೇಸಿಗೆಯ ರಜೆ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಬೇಸಿಗೆಯ 39 ದಿನಗಳ ಕಾಲ ಮಧ್ಯಾಹ್ನದ ಬಿಸಿಯೂಟವನ್ನು ಶಾಲಾ ಮಕ್ಕಳಿಗೆ ನೀಡಲು ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ನಾಳೆ ಸಂಪುಟ ಸಭೆಯಲ್ಲಿ ಬೇಸಿಗೆಯಲ್ಲೂ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ವಿಚಾರ ಚರ್ಚೆಗೆ ಬರಲಿದೆ. ಚರ್ಚೆ ನಂತರ ಸಂಪುಟ ಸಭೆ ಬಿಸಿಯೂಟ ನೀಡಲು ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವ ಪ್ರಯತ್ನ ನಡೆಯುತ್ತಿದ್ದು, ರಜೆಯ ಸಂದರ್ಭದಲ್ಲೂ ಕೂಡ ಮಕ್ಕಳು ಶಾಲೆಯಿಂದ ದೂರ ಉಳಿಯಬಾರದು. ಜೊತೆಗೆ ಬಡ ಮಕ್ಕಳ ಹಸಿವು ಕೂಡ ನೀಗಬೇಕು ಎಂಬ ಉದ್ದೇಶವನ್ನು ಶಿಕ್ಷಣ ಇಲಾಖೆ ಹೊಂದಿದೆ.