ಮಂಗಳೂರು, ಮೇ 29: ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಸಂಚಾರಿ ರಥಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್. ಬೀಳಗಿ ಅವರು ಸೋಮವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕಾನೂನು ಸಾಕ್ಷರತೆ ಎಂಬುದು ಜೀವನ ಯಾತ್ರೆಯಂತೆ. ಹುಟ್ಟಿನಿಂದ ಸಾವಿನವರೆಗೂ ಮಾನವನ ಜೀವನದಲ್ಲಿ ಕಾನೂನು ಹಾಸುಹೊಕ್ಕಾಗಿದ್ದು, ಕಾನೂನಿನ ಅರಿವು ಅತೀ ಅಗತ್ಯ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ವೈಶಾಲಿ ಮಾತನಾಡಿ, ಜೀವನದಲ್ಲಿ ಕಾನೂನಿನ ಅವಗಣನೆಗೆ ಅವಕಾಶವಿಲ್ಲ. ಹಾಗಾಗಿ ಈ ಅಭಿಯಾನದ ಉದ್ದೇಶ ಜನರಿಗೆ ತಲುಪಲಿ ಎಂದು ಅವರು ಶುಭ ಹಾರೈಸಿದರು.
ಡಿಸಿಪಿ ಉಮಾ ಪ್ರಶಾಂತ್ ಮಾತನಾಡಿ, ಜೀವನದಲ್ಲಿ ಪ್ರತಿಯೊಂದು ವಿಚಾರಗಳು ಕಾನೂನು ಮತ್ತು ನಿಯಮಗಳಿಗೆ ಒಳಪಟ್ಟಿರುತ್ತದೆ. ಹಾಗಾಗಿ ಕಾನೂನಿನ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವ ಅಗತ್ಯವಿದೆ. ಕಾನೂನಿನ ಅರಿವಿದ್ದಾಗ ಇಲಾಖೆಗಳು ಕೂಡಾ ಸಮರ್ಪಕವಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯ ಎಂದವರು ಹೇಳಿದರು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಂ.ಆರ್. ಬಲ್ಲಾಳ್ ಮಾತನಾಡಿ ಶುಭ ಹಾರೈಸಿದರು.
ಈ ಸಂದರ್ಭ ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ. ನಾಗರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ. ರಾಮಕೃಷ್ಣ ರಾವ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೈ. ಶಿವರಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನಾಗರಾಜಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುಂದರ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ ಸ್ವಾಗತಿಸಿದರು. ವಕೀಲರ ಸಂಘದ ಪ್ರಧನಾ ಕಾರ್ಯದರ್ಶಿ ದಿನಕರ ಶೆಟ್ಟಿ ವಂದಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮತ್ತ ನಗರ ಪೊಲೀಸ್, ಮಂಗಳೂರು ವಕೀಲರ ಸಂಘ, ಜಿಲ್ಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಪ್ರಸಾರ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Comments are closed.