ಕರ್ನಾಟಕ

ವಿಧಾನಪರಿಷತ್ ಚುನಾವಣೆ: ಬಿಜೆಪಿ, ಜೆಡಿಎಸ್‌ಗೆ ಗೆಲುವು

Pinterest LinkedIn Tumblr

ಬೆಂಗಳೂರು: ವಿಧಾನಪರಿಷತ್​ನ ಆರು ಕ್ಷೇತ್ರಗಳ ಪೈಕಿ ಆಗ್ನೇಯ ಶಿಕ್ಷಕರ ಕ್ಷೇತ್ರವನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡರೆ, ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಜೆಡಿಎಸ್ ಮತ್ತೊಮ್ಮೆ ಜಯಭೇರಿ ಬಾರಿಸಿದೆ.

ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣ ಸ್ವಾಮಿ 8,479 ಮತ ಪಡೆದು 1,872 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್​ನ ರಮೇಶ್​ಬಾಬು 6,607 ಮತ ಪಡೆದು ಪರಾಭವಗೊಂಡಿದ್ದಾರೆ. ಕಾಂಗ್ರೆಸ್​ನ ಎಂ. ರಾಮಪ್ಪ 1,652 ಮತ ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರೆ, 915 ಮತ ತಿರಸ್ಕೃತಗೊಂಡಿವೆ. 25 ನೋಟಾ ಚಲಾವಣೆಯಾಗಿವೆ.

ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಸತತ 4ನೇ ಬಾರಿಗೆ ಗೆಲುವಿನ ನಗೆ ಬೀರಿದ್ದಾರೆ. ಆದರೆ ಇದು ಅವರಿಗೆ ಪ್ರಯಾಸದ ಗೆಲುವಾಗಿದೆ. ಕಳೆದ ಬಾರಿ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಈ ಸಲವೂ ವಿಜಯಲಕ್ಷ್ಮಿ ಒಲಿಯಲಿಲ್ಲ. ಮೊದಲ ಪ್ರಯತ್ನದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ನಿರಂಜನಮೂರ್ತಿಗೆ ಸೋಲಿನ ಕಹಿ ಅನುಭವವಾಗಿದೆ.

ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಬೋಜೇಗೌಡ 8,647 ಮತ ಪಡೆದು ವಿಜೇತರಾಗಿದ್ದಾರೆ. ಬಿಜೆಪಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ 5,812 ಮತ ಗಳಿಸಿ ಎರಡನೇ ಸ್ಥಾನಕ್ಕಿಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ 2,578 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಬೆಂಗಳೂರಲ್ಲಿ ಬಿಜೆಪಿ ಮುಂದು

ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 2ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅ.ದೇವೇಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್​ನ ರಾಮೋಜಿ ಗೌಡಗೆ 2ನೇ ಸ್ಥಾನ. ಜೆಡಿಎಸ್​ನ ಅಚ್ಚೇಗೌಡ ಶಿವಣ್ಣ ಮೂರನೇ ಸ್ಥಾನದಲ್ಲಿದ್ದಾರೆ.

ಆಯನೂರು ಗೆಲುವು ಬಹುತೇಕ ಖಚಿತ

ನೈಋತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ನೈಋತ್ಯ ಪದವೀಧರರ ಕ್ಷೇತ್ರದ ನಾಲ್ಕನೇ ಸುತ್ತಿನ ಮತ ಎಣಿಕೆ ಅಂತ್ಯಕ್ಕೆ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ್ 5,832 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆಯನೂರು 15,186 ಮತ ಪಡೆದಿದ್ದು, ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಎಸ್. ಪಿ.ದಿನೇಶ್ 9,354 ಮತಗಳನ್ನು ಪಡೆದಿದ್ದಾರೆ. ಆಯನೂರು ಮಂಜುನಾಥ್ ಗೆಲುವು ಬಹುತೇಕ ನಿಶ್ಚಿತವಾಗಿದೆ.

ವೈಎಎನ್ ಬೆಂಬಲಿಗರ ಸಂಭ್ರಮಾಚರಣೆ

ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲೂಕು, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಂದ ಆಗಮಿಸಿದ್ದ ನಾರಾಯಣಸ್ವಾಮಿ ಅವರ ನೂರಾರು ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.

ಈಶಾನ್ಯದಲ್ಲಿ ಬಿಜೆಪಿ ಮುನ್ನಡೆ

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 4ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಿ.ಶ್ರೀನಿವಾಸ್ 650 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್​ನ ಚಂದ್ರಶೇಖರ ಪಾಟೀಲಗೆ ಎರಡನೇ ಸ್ಥಾನ, ಜೆಡಿಎಸ್ ಅಭ್ಯರ್ಥಿ ಪ್ರತಾಪರೆಡ್ಡಿ ಮೂರನೇ ಸ್ಥಾನದಲ್ಲಿದ್ದಾರೆ. ಪ್ರಥಮ ಪ್ರಾಶಸ್ಱದ ಮತಗಳ ಎಣಿಕೆ ಮುಗಿದಿದ್ದು 2ನೇ ಪ್ರಾಶಸ್ಱದ ಎಣಿಕೆ ನಡೆದಿದೆ.

Comments are closed.