ಮಂಗಳೂರು, ಜುಲೈ.26: ಧರ್ಮಸ್ಥಳ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸೆ.3ರಂದು “ಧರ್ಮಸಂಸದ್” ನಡೆಯಲಿದ್ದು, ಧರ್ಮಸಂಸದ್‌ಗೆ ಎಲ್ಲಾ ಸಿದ್ದತೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದ್ದಾರೆ.
ಮಂಗಳೂರಿನ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸಂಸದ್‌ಗೆ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಮಠಾಧೀಶರು, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ ಎಂದು ಹೇಳಿದರು.
ಉಳಿದಂತೆ ಬದರಿ, ಕೇದಾರ, ಗಂಗೋತ್ರಿ, ನೇಮಿಶಾರಣ್ಯ, ಚಿತ್ರಕೂಟ, ಉಜ್ಜಯಿನಿ, ನಾಸಿಕ್, ರಾಮೇಶ್ವರ, ಅಸ್ಸಾಂ, ಕೇರಳ, ತಮಿಳುನಾಡು ಸೇರಿದಂತೆ ದೇಶ ವಿದೇಶದಿಂದ 2 ಸಾವಿರಕ್ಕೂ ಅಧಿಕ ಸಾಧು ಸಂತರು ಭಾಗವಹಿಸಲಿದ್ದಾರೆ. ಈಗಾಗಲೇ ಉತ್ತರಭಾರತ, ದಕ್ಷಿಣ ಭಾರತ ಪ್ರವಾಸ ಕೈಗೊಳ್ಳಲಾಗಿದೆ. 25ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಸ್ವಾಮೀಜಿಯವರು ಕಾರ್ಯಕ್ರಮಕ್ಕೆ ಸಂಬಂಧಪಟ್ಟ ವಿವರ ನೀಡಿದರು.
ಒಡಿಯೂರಿನ ಗುರುದೇವಾನಂದ ಸ್ವಾಮೀಜಿ, ಬಲ್ಯೊಟ್ಟುವಿನ ವಿಖ್ಯಾತಾನಂದ ಸ್ವಾಮೀಜಿ, ಕೇಮಾರುವಿನ ಈಶ ವಿಠಲದಾಸ ಸ್ವಾಮೀಜಿ, ತೀರ್ಥಹಳ್ಳಿಯ ರೇಣುಕಾನಂದ ಸ್ವಾಮೀಜಿ, ಬಾಳೆಕೋಡಿಯ ಶಶಿಕಾಂತ ಮಣಿ ಸ್ವಾಮೀಜಿ ಮತ್ತು ಜನಪ್ರತಿನಿಧಿಗಳು, ಉದ್ಯಮಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಮತ್ತಿತ್ತರ ಗಣ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Comments are closed.