ಗೋವಾ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ (63) ಅವರು ಭಾನುವಾರ ವಿಧಿವಶರಾಗಿದ್ದಾರೆ.
ಹಲವು ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಅವರು ಇಂದು (ಭಾನುವಾರ) ಪಣಜಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ಮನೋಹರ್ ಪರಿಕ್ಕರ್ ಹಲವು ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿದ್ದರು. ಕಳೆದ ವರ್ಷ ಫೆಬ್ರವರಿಯಲ್ಲಿ ಪರಿಕ್ಕರ್‌ಗೆ ಕ್ಯಾನ್ಸರ್ ಕಾಯಿಲೆ ಇದೆ ಎಂಬುದು ಪತ್ತೆಯಾಗಿತ್ತು. ಬಳಿಕ ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದಿದ್ದರು. ಗೋವಾ, ಮುಂಬಯಿ, ಅಮೆರಿಕಾ ಮತ್ತು ದಿಲ್ಲಿಯಲ್ಲಿ ಚಿಕಿತ್ಸೆ ಪಡೆದ ಬಳಿಕ ನಿವಾಸಕ್ಕೆ ಮರಳಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು.
ಮನೋಹರ್ ಪರಿಕ್ಕರ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ , ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಮನೋಹರ್ ಪರಿಕ್ಕರ್ ನಿಧನದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಕೇಂದ್ರ ಸಚಿವ ಸಂಪುಟ ಸಭೆ ಸೇರಿ ಸಂತಾಪ ಸೂಚಿಸಲಿದೆ ಎನ್ನಲಾಗಿದೆ.
Comments are closed.