ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ ಬಗ್ಗೆ ಘೋಷಿಸಿರುವ ಚಿತ್ರನಟಿ ಸುಮಲತಾ ಅಂಬರೀಶ್ ಅವರು ಮಾರ್ಚ್ 20ರಂದು ನಾಮಪತ್ರ ಸಲ್ಲಿಕೆ ಜತೆಗೆ ಅಂಬಿ ಅಭಿಮಾನಿಗಳು ಮತ್ತು ಬೆಂಬಲಿಗರ ಸಭೆ ಕರೆಯುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಸ್ಪರ್ಧೆಯ ಬಗ್ಗೆ ಘೋಷಿಸಿದ ಸುಮಲತಾ ಅಂಬರೀಶ್ ಅವರು ಮಧ್ಯಾಹ್ನದ ಬಳಿಕ ತಿರುಪತಿಗೆ ತೆರಳಿದ್ದಾರೆ.
ದೇವರ ದರ್ಶನದ ಬಳಿಕ ಮೈಸೂರಿಗೆ ಮಂಗಳವಾರ ಸಂಜೆ ಆಗಮಿಸಿ, ಅಂದು ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮಾರ್ಚ್ 20 ರಂದು ಮುಂಜಾನೆ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಬೆಳಗ್ಗೆ 11 ಗಂಟೆಗೆ ನೇರವಾಗಿ ಮಂಡ್ಯಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸುವರು.
ಆನಂತರ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಬೃಹತ್ ಮೆರವಣಿಗೆಯಲ್ಲಿ ಸಿಲ್ವರ್ ಜುಬಿಲಿ ಪಾರ್ಕ್ ಆಗಮಿಸಿ, ಬೃಹತ್ ಬಹಿರಂಗ ಸಭೆ ನಡೆಸುವ ಮೂಲಕ ಅಧಿಕೃತ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಮೆರವಣಿಗೆ ಹಾಗೂ ಪ್ರಚಾರ ಸಭೆಯಲ್ಲಿ ಚಿತ್ರನಟರಾದ ದರ್ಶನ್, ಯಶ್ , ರಾಕ್ ಲೈನ್ ವೆಂಕಟೇಶ್ , ದೊಡ್ಡಣ್ಣ, ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಚಿತ್ರರಂಗದ ಅನೇಕ ನಟ ನಟಿಯರು ರಾಜಕೀಯ ಮುಖಂಡರು ಅಭಿಮಾನಿಗಳು ಭಾಗವಹಿಸಲಿದ್ದಾರೆ.
ಸುಮಲತಾ ಅವರು ನಾಮಪತ್ರ ಸಲ್ಲಿಸಿರುವ ಸಭೆ ನಡೆಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಳನ್ನು ನಡೆಸಲಾಗಿದೆ. ಸಹಸ್ರಾರು ಮಂದಿ ಬಹಿರಂಗ ಸಭೆಯಲ್ಲಿ ಭಾಗವಹಿಸುವರು.
ಈ ಸಂಬಂಧ ಸಂಬಂಧಿಸಿದ ಅಧಿಕಾರಿಗಳಿಂದ ಪ್ರಚಾರ ಸಭೆ ಆಗ ಮೆರವಣಿಗೆಗೆ ಅನುಮತಿ ಪಡೆಯಲಾಗಿದೆ ಎಂದು ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ತಿಳಿಸಿದ್ದಾರೆ.
Comments are closed.