ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳಲ್ಲಿ ಮಂಗಳವಾರ ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಸಂಜೆಯಿಂದ ಮನೆ, ಮನೆ ಪ್ರಚಾರ ಆರಂಭವಾಗಿದೆ.
ಸ್ಟಾರ್ ಕ್ಷೇತ್ರ ಎಂದು ಗುರುತಿಸಿಕೊಂಡಿರುವ ಮಂಡ್ಯ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಮೈಸೂರಿನಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮುಖಂಡರು ಬಿರುಸಿನ ಬಹಿರಂಗ ಪ್ರಚಾರ ನಡೆಸಿದ್ದರು. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಬೃಹತ್ ಸ್ವಾಭಿಮಾನಿ ಸಮಾವೇಶ ನಡೆಸಿದ್ದು, ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ನ ದರ್ಶನ್, ಯಶ್, ದೊಡ್ಡಣ್ಣ, ಅಂಬರೀಶ್ ಪುತ್ರ ಅಭಿಷೇಕ್, ರಾಕ್ ಲೈನ್ ವೆಂಕಟೇಶ್ ಸಾಥ್ ನೀಡಿದ್ದರು. ಮತ್ತೊಂದೆಡೆ ಮಂಡ್ಯದಲ್ಲಿ ಪುತ್ರ ನಿಖಿಲ್ ಪರ ಮುಖ್ಯಮಂತ್ರಿ ಕುಮಾರಸ್ವಾಮಿ ರೋಡ್ ಶೋ ನಡೆಸಿ ಮತಯಾಚಿಸಿದ್ದರು.
ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯದಲ್ಲಿ ಮತದಾನ ನಡೆಯಲಿದೆ. ಉಳಿದ 14 ಕ್ಷೇತ್ರಗಳಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದೆ.
Comments are closed.