ಕರ್ನಾಟಕ

ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ರೀತಿಯ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ

Pinterest LinkedIn Tumblr

ಬೆಳಗಾವಿ: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಕುಂದಾನಗರಿ ಬೆಳಗಾವಿಯಲ್ಲಿಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಾಣ ಮಾಡಿಕೊಡಲಾಗುವುದು, ಆಸ್ತಿ ನಷ್ಟವಾದವರಿಗೂ ಪರಿಹಾರ ನೀಡಲಾಗುವುದು, ಪ್ರವಾಹದಲ್ಲಿ ಮೃತರಾದವರಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಜಗದೀಶ್ ಶೆಟ್ಟರ್, ಈಶ್ವರಪ್ಪ, ಶೋಭಾ ಕರಂದ್ಲಾಜೆ, ಕೋಟಾ ಶ್ರೀನಿವಾಸ ಪೂಜಾರಿ, ಪ್ರತಾಪ್ ಸಿಂಹ, ಬಿ.ವೈ. ರಾಘವೇಂದ್ರ, ಸಿ.ಎಂ. ಉದಾಸಿ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಾಚರಣೆ ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು.

ಈ ಮಧ್ಯೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಹೆಲಿಕಾಪ್ಟರ್ ಒದಗಿಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಬಳಿ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ವಿಶೇಷ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ತಂಡ ಇಂದು ಸಂಜೆ ಬೆಳಗಾವಿಗೆ ಆಗಮಿಸುವ ಸಾಧ್ಯತೆ ಇದೆ.

Comments are closed.