ಮುಂಬೈ: ಮುಖ್ಯಮಂತ್ರಿ ಸ್ಥಾನ ಹಂಚಿಕೆ ವಿಚಾರವಾಗಿ ಬಿಜೆಪಿ ಮತ್ತು ಶಿವಸೇನೆ ನಡುವೆ ಹಗ್ಗಜಗ್ಗಾಟ ನಡೆದಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರೆದಿದೆ. ಏತನ್ಮಧ್ಯೆ ಸರ್ಕಾರ ರಚನೆಗೆ ಹಕ್ಕು ಮಂಡಿಸದೆ, ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೌಶ್ಯರಿ ಅವರೊಂದಿಗಿನ ಸಭೆ ಬಳಿಕ ಫಡ್ನವೀಸ್ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಮುಂದಿನ ಸರ್ಕಾರ ರಚನೆಗೆ ಹಕ್ಕು ಮಂಡಿಸದೆ ಇರುವುದು ಭಾರೀ ಕುತೂಹಲ ಮೂಡಿಸಿದೆ.
ಹಾಲಿ ವಿಧಾನಸಭೆಯ ಅವಧಿ ಶನಿವಾರಕ್ಕೆ ಮುಕ್ತಾಯಗೊಳ್ಳಲಿದೆ. ಆದರೆ, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಸೇರಿದಂತೆ ಯಾವೊಂದು ಪಕ್ಷಗಳು ಸರ್ಕಾರ ರಚನೆಗೆ ಹಕ್ಕು ಮಂಡಿಸದೆ ಇರುವುದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಸಾಧ್ಯತೆ ಇದೆ.
ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ದೇವೇಂದ್ರ ಫಡ್ನವೀಸ್ ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಾಧಿಸಲಿಲ್ಲ. ಆದರೆ, ಮೈತ್ರಿಯೊಂದಿಗೆ ಸರ್ಕಾರ ರಚನೆ ಮಾಡುವ ಜನಾದೇಶ ನಮಗೆ ಸಿಕ್ಕಿದೆ. ಉದ್ಧವ್ ಠಾಕ್ರೆ ಅವರು ತಮ್ಮ ಮಾತಿನಿಂದ ಹಿಂದೆ ಸರಿದಿದ್ದಾರೆ. ಅವರ ಸಮ್ಮುಖದಲ್ಲಿ ಸಿಎಂ ಸ್ಥಾನ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಶಿವಸೇನೆ ಈಗ ಸಿಎಂ ಹಂಚಿಕೆ ಬೇಡಿಕೆ ಇಡುವ ಮೂಲಕ ಜನಾದೇಶಕ್ಕೆ ದ್ರೋಹ ಎಸಗಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿ ಮತ್ತು ಶಿವಸೇನೆ ಮೈತ್ರಿಯೂ ಸರ್ಕಾರ ರಚನೆಗೆ ಬೇಕಾಗಿರುವ ಬಹುಮತವನ್ನು ಪಡೆದಿದ್ದರೂ ಶಿವಸೇನೆ ಮುಖ್ಯಮಂತ್ರಿ ಸ್ಥಾನ ಹಂಚಿಕೆಯ ಬೇಡಿಕೆಯನ್ನು ಇಟ್ಟಿದೆ. ಆದರೆ, ಸಿಎಂ ಸ್ಥಾನವನ್ನು ಸುತಾರಾಂ ಬಿಟ್ಟುಕೊಡುವುದಿಲ್ಲ ಎಂದು ಬಿಜೆಪಿ ಪಟ್ಟುಹಿಡಿದಿರುವುದರಿಂದ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರೆದಿದೆ. ಇನ್ನು ಕಾಂಗ್ರೆಸ್-ಎನ್ಸಿಪಿ ಮೈತ್ರಿ ಕೂಡ ಕಾದು ನೋಡುವ ತಂತ್ರಕ್ಕೆ ಮೊರೆಹೋಗಿದ್ದು, ಶಿವಸೇನೆ ಬೆಂಬಲ ನೀಡಿದರೆ ಸರ್ಕಾರ ರಚನೆಗೆ ಸಿದ್ಧವಾಗಿದೆಯಾದರೂ ಸೇನೆಯ ಮುಖಂಡರು ಮಾತ್ರ ಈವರೆಗೂ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಶಿವಸೇನೆಯ ನಾಯಕರಲ್ಲಿ ಪಕ್ಷಾಂತರ ಭೀತಿ ಕಾಡುತ್ತಿದ್ದು, ಬಿಜೆಪಿ ತನ್ನ ಪಕ್ಷದ ಶಾಸಕರನ್ನು ಸೆಳೆದುಕೊಳ್ಳಬಹುದು ಎಂಬ ಭಯದಿಂದ ಎಲ್ಲ ಶಾಸಕರನ್ನು ಹೋಟೆಲ್ನಲ್ಲಿ ಇರಿಸಿದೆ.
Comments are closed.