ಮಂಗಳೂರು / ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 81 ಗ್ರಾಮಗಳ ಒಟ್ಟು 347 ಕೋ.ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮ ರವಿವಾರ ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜರಗಿತು.
ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಬೇಡಿಕೆಗೆ ತಕ್ಕಂತೆ ಅನುದಾನ ಒದಗಿಸುವ ಜತೆಗೆ ರಾಜ್ಯದ ಇತರ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ಮೂಲಕ ಮುಂದಿನ ಮೂರೂವರೆ ವರ್ಷ ಸುಭದ್ರ ಸರಕಾರ ನೀಡುವುದಾಗಿ ಹೇಳಿದರು.
ತಾಲೂಕಿನ ಜನರ ಆಶೋತ್ತರಗಳಿಗೆ ಸ್ಪಂದನೆ ನೀಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಅಪೇಕ್ಷಿಸಿದ ಕಾಮಗಾರಿಗಳಿಗೆ ಅನುದಾನ ಪೂರೈಸಲಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 150 ಸ್ಥಾನ ಗೆಲ್ಲುವ ಸಂಕಲ್ಪ ಮಾಡಿದ್ದೇವೆ ಎಂದರು.
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಾಗ ಸಂತ್ರಸ್ತರ ನೆರವಿಗೆ ಧಾವಿಸಿದವರನ್ನು ಸಿಎಂ ಅಭಿನಂದಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಯವರು ನೀಡಿದ 25 ಕೋ.ರೂ. ನೆರವು ಸೇರಿದಂತೆ ರಾಜ್ಯದ ಪರಿಹಾರ ನಿಧಿಯಲ್ಲಿ ಒಟ್ಟು 500 ಕೋ.ರೂ. ಸಂಗ್ರಹವಾಗಿದೆ ಎಂದರು.
ಪ್ರಸ್ತಾವನೆಯೊಂದಿಗೆ ಮಾತನಾಡಿದ ಸ್ಥಳೀಯ ಶಾಸಕ ಹರೀಶ್ ಪೂಂಜ ಅವರು, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ರಬ್ಬರ್ ಮತ್ತು ಅಡಿಕೆ ಬೆಳೆಗಾರರ ಹಿತರಕ್ಷಣೆ ಕಾಪಾಡುವುದು ನನ್ನ ಗುರಿ ಎಂದರು. ಶೈಕ್ಷಣಿಕ ಅಭಿವೃದ್ಧಿಗೆ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ, ಬೆಳ್ತಂಗಡಿ ತಾಲೂಕಿನ 81 ಗ್ರಾಮಗಳ ದೇವಸ್ಥಾನ ಮತ್ತು ದೈವಸ್ಥಾನ ಅಭಿವೃದ್ಧಿ, ಪೊಲೀಸ್ ಠಾಣೆ, ಅಗ್ನಿಶಾಮಕ ದಳ ತೆರೆಯಲು ಅನುದಾನ ನೀಡುವಂತೆ ಸಿಎಂ ಮತ್ತು ಸಚಿವರನ್ನು ವಿನಂತಿಸಿದರು. ಇದೇ ವೇಳೆ ಅಭಿವೃದ್ಧಿ ಕುರಿತ “ಬೆಸುಗೆ’ ಪುಸ್ತಕ ಬಿಡುಗಡೆಗೊಳಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಳ್ಳಿ ಕಿರೀಟ ತೊಡಿಸಿ, 75 ಕೆ.ಜಿ. ತೂಕ, 31 ಅಡಿ ಉದ್ದದ ಬೃಹತ್ ತುಳಸಿ ಮತ್ತು ಸೇವಂತಿಗೆ ಹೂವುಗಳ ಮಾಲೆ ಹಾಕಿ ಶಾಸಕ ಹರೀಶ್ ಪೂಂಜ ಗೌರವಿಸಿದರು. ಪವಿತ್ರ ನೇತ್ರಾವತಿ ತೀರ್ಥ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಡಾ.ಭರತ್, ಸಂಜೀವ ಮಠಂದೂರು, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪ. ವಲಯ ಐಜಿಪಿ ಅರುಣ್ ಚಕ್ರವರ್ತಿ, ಎಸ್‌ಪಿ ಲಕ್ಷ್ಮೀ ಪ್ರಸಾದ್, ಜಿ.ಪಂ. ಸಿಇಒ ಡಾ| ಸೆಲ್ವಮಣಿ, ಎಸಿ ಡಾ| ಯತೀಶ್ ಉಳ್ಳಾಲ, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಉಪಸ್ಥಿತರಿದ್ದರು
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ವಾಗತಿಸಿದರು. ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ನಿರೂಪಿಸಿ, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ವಂದಿಸಿದರು.
Comments are closed.