ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ 21 ದಿನಗಳ ಕಾಲದ ಸಂಪೂರ್ಣ ಲಾಕ್‌ಡೌನ್‌ನ್ನು ವಿಸ್ತರಣೆ ಮಾಡಬೇಕೋ ಬೇಡವೋ ಎಂಬ ಕುರಿತಾಗಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಣೆ ಮಾಡಿರುವ ಲಾಕ್‌ಡೌನ್ ಅವಧಿ ಏಪ್ರಿಲ್ 14 ಕ್ಕೆ ಮುಕ್ತಾಯಗೊಳ್ಳಲಿದೆ. ಆದರೆ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮುಂದುವರಿಸಬೇಕು ಎಂಬ ಅಭಿಪ್ರಾಯಗಳು ಕ್ಯಾಬಿನೆಟ್ ಸಭೆಯಲ್ಲಿ ವ್ಯಕ್ತವಾಗಿವೆ.
ಈ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡುವ ಕುರಿತಾಗಿ ಸಂಪುಟ ಸಭೆಯಲ್ಲಿ ಹಲವು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿಯ ಜೊತೆಗೆ ಚರ್ಚೆ ನಡೆಸಿದ ಬಳಿಕ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಿದರು ಕೆಲವು ಕಡೆಗಳಲ್ಲಿ ಅದು ಪಾಲನೆ ಆಗುತ್ತಿಲ್ಲ. ಪರಿಣಾಮ ಕೊರೊನಾ ಸೋಂಕು ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ತಬ್ಲೀಘಿ ಜಮಾತ್ ಧರ್ಮಸಭೆಯಲ್ಲಿ ಭಾಗಿಯಾದವರಲ್ಲಿ ಕೊರೊನಾ ಕಾರಣಿಸಿಕೊಂಡಿದ್ದು ರಾಜ್ಯದಲ್ಲಿ 800 ಮಂದಿಯನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದೆ.
ಇನ್ನು ಲಾಕ್‌ಡೌನ್ ಮುಂದುವರಿಸಬೇಕೋ ಬೇಡ್ವೋ ಎಂಬ ಕುರಿತಾಗಿ ತಜ್ಞರ ತಂಡ ಮುಖ್ಯಮಂತ್ರಿ ಬಿಎಸ್‌ವೈಗೆ ವರದಿಯನ್ನು ಕೊಟ್ಟಿದ್ದು ಈ ಕುರಿತಾಗಿಯೂ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆದಿದೆ. ಬಹುತೇಕ ಸಚಿವರು ಏಪ್ರಿಲ್ ಕೊನೆಯ ವರೆಗೂ ಲಾಕ್‌ಡೌನ್ ಮುಂದುವರಿಸುವುದು ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒರಿಸ್ಸಾ ಮಾದರಿಯಲ್ಲಿ ರಾಜ್ಯದಲ್ಲೂ ಲಾಕ್‌ಡೌನ್ ವಿಸ್ತರಣೆ ನಿರ್ಧಾರ ಕೈಗೊಳ್ಳುವುದು ಉತ್ತಮ ಎಂದಿದ್ದಾರೆ.
ಆದರೆ ಕೆಲವು ಸಚಿವರು ಸಂಪೂರ್ಣ ಲಾಕ್‌ಡೌನ್ ವಿಸ್ತರಣೆ ಮಾಡಿದರೆ ಆರ್ಥಕ ಸಮಸ್ಯೆ ಬಿಗಡಾಯಿಸಲಿದ್ದು ಈ ನಿಟ್ಟಿನಲ್ಲಿ ಹಾಟ್‌ಸ್ಪಾಟ್‌ಗಳಲ್ಲಿ ಮಾತ್ರ ಲಾಕ್‌ಡೌನ್ ವಿಸ್ತರಣೆ ಮಾಡಿ ಉಳಿದ ಕಡೆಗಳಲ್ಲಿ ಬೇಡ ಎಂಬ ಸಲಹೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಆದರೆ ಸಭೆಯಲ್ಲಿ ಲಾಕ್‌ಡೌನ್ ವಿಸ್ತರಣೆ ಕುರಿತಾಗಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪ್ರಧಾನಿ ನರೇಂದ್ರ ಮೋದಿಯ ಜೊತೆಗೆ ಚರ್ಚೆ ನಡೆಸಿ ಸಿಎಂ ಬಿ.ಎಸ್‌ವೈ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ.
Comments are closed.