ಕರ್ನಾಟಕ

ರಾಜ್ಯದ ಧಾರ್ಮಿಕ ಸ್ಥಳಗಳನ್ನು ಪುನಃ ತೆರೆಯಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ನಾಲ್ಕನೇ ಹಂತದ ಲಾಕ್‌ಡೌನ್ ಮುಕ್ತಾಯದ ಬಳಿಕ ರಾಜ್ಯದ ಧಾರ್ಮಿಕ ಸ್ಥಳಗಳನ್ನು ಪುನಃ ತೆರೆಯಲು ಅನುಮತಿ ನೀಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತು ಖುದ್ದು ಮಾಹಿತಿ ನೀಡಿರುವ ಬಿಎಸ್‌ವೈ, ಮುಂಬರುವ ಜೂನ್1ರಿಂದ ರಾಜ್ಯದ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮೇ 31ರ ಬಳಿಕ ಲಾಕ್‌ಡೌನ್ ಕುರಿತು ಕೇಂದ್ರ ಸರ್ಕಾರ ಏನು ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಗಮನಿಸುವುದಾಗಿ ಹೇಳಿರುವ ಬಿಎಸ್‌ವೈ, ಕೇಂದ್ರದ ಮಾರ್ಗಸೂಚಿಗಳನ್ವಯ ರಾಜ್ಯದ ಧಾರ್ಮಿಕ ಸ್ಥಳಗಳನ್ನು ಪುನಃ ತೆರೆಯಲು ಅವಕಾಶ ಕಲ್ಪಿಸುವಂತೆ ಕೋರಿ ಪ್ರಧಾನಿ ಮೋದಿ ಅವರಿಗೆ ಮನವಿ ಪತ್ರ ಬರೆದಿರುವುದಾಗಿ ಹೇಳಿದರು.

ಇದಕ್ಕೂ ಮೊದಲು ನಡೆದ ಸಭೆಯಲ್ಲಿ ರಾಜ್ಯದ ಪ್ರಮುಖ ದೇವಸ್ಥಾನಗಳನ್ನು ತೆರೆಯುವ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರ್ಧಾರ ಕೈಗೊಂಡಿದ್ದಾರೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದರು.

ಲಾಕ್‌ಡೌನ್ ಮಾರ್ಗಸೂಚಿಯಲ್ಲಿ ಸಾರಿಗೆ ಹಾಗೂ ಇತರ ಸೇವೆಗಳಿಗೆ ಅನುಮತಿ ಕಲ್ಪಿಸಲಾಗಿದೆಯಾದರೂ, ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಿಲ್ಲ. ಈ ಕಾರಣಕ್ಕೆ ರಾಜ್ಯದ ಪ್ರಮುಖ ಮಂದಿರ, ಮಸೀದಿ ಹಾಗೂ ಚರ್ಚ್‌ಗಳನ್ನು ತೆರೆಯಲು ಅನುಮತಿ ನೀಡುವಂತೆ ಬಿಎಸ್‌ವೈ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

Comments are closed.