ಕರಾವಳಿ

ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಇಂದಿಗೂ ನಮಗೆ ಆದರ್ಶ : ಸಚಿವ ಪೂಜಾರಿ

Pinterest LinkedIn Tumblr

ಮಂಗಳೂರು ಅಕ್ಟೋಬರ್. 02 : ಜಿಲ್ಲಾಡಳಿತದ ವತಿಯಿಂದ ನಗರದ ಪುರಭವನದ ಎದುರು ಇರುವ ಗಾಂಧೀ ಪಾರ್ಕ್‍ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀ ಅವರ 151 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ್, ಮಹಾನಗರ ಪಾಲಿಕೆಯ ಉಪಮೇಯರ್ ವೇದಾವತಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಗಾಂಧೀ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಇಂದು ನಾವೆಲ್ಲರೂ ರಾಷ್ಟ್ರಪಿತನನ್ನು ಸ್ಮರಿಸಲೇ ಬೇಕಾದ ದಿನ ದೇಶದ ಸ್ವಾತಂತ್ರ್ಯಕ್ಕಾಗಿ ಚಳುವಳಿಗಳ ಮೂಲಕ ಹೋರಾಡಿದ ಮಹಾತ್ಮ ಗಾಂಧೀಜಿ ಅವರ ಚಿಂತನೆಗಳು ನಮಗೆ ಇಂದಿಗೂ ಆದರ್ಶವಾಗಿದೆ.

ಗಾಂಧೀಜಿಯವರು ಪ್ರತಿಪಾದಿಸಿದ ಸತ್ಯ, ಶಾಂತಿ, ಸಹಬಾಳ್ವೆ, ಸ್ವಚ್ಛತೆ, ಅಹಿಂಸಾತ್ಮಕ ತತ್ವಗಳನ್ನು ನಮ್ಮ ದೈನಂದಿನ ದಿನಗಳಲ್ಲಿ ಅಳವಡಿಸಿಕೊಳ್ಳುವುದರಿಂದ ನಾವು ಈ ಸಮಾಜಕ್ಕೆ ಒಂದು ಉತ್ತಮ ಪ್ರಜೆಯಾಗುವುದರಲ್ಲಿ ಸಂದೇಹವಿಲ್ಲ. ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರ ವ್ಯಾಪಿ ಸ್ವಚ್ಛ ಭಾರತ ಅಭಿಯಾನವನ್ನು ಹಮ್ಮಿಕೊಳ್ಳುವ ಮೂಲಕ ಕ್ರಾಂತಿ ಮೂಡಿಸಿದ್ದಾರೆ ಎಂದು ಹೇಳಿದರು.

ಶಾಲಾ ವಿದ್ಯಾರ್ಥಿಗಳು ರಘುಪತಿ ರಾಘವ ಭಜನೆ ಗೀತೆಯನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಮದನ್ ಮೋಹನ್, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸ್ಮಾರ್ಟ್ ಸಿಟಿ ಎಂ.ಡಿ. ಮೊಹಮ್ಮದ್ ನಜೀರ್, ಮಂಗಳೂರು ತಾಲೂಕಿನ ತಹಶೀಲ್ದಾರ್ ಗುರುಪ್ರಸಾದ್, ವಾರ್ತಾಧಿಕಾರಿ ಮಂಜುನಾಥ್ ಬಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ್, ಜಿಲ್ಲಾ ಭಾರತ್ ಸೇವಾದಳದ ಅಧ್ಯಕ್ಷ ಬಶೀರ್ ಬೈಕಂಪಾಡಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Comments are closed.