ಕೊಪ್ಪಳ: ಉಹಾಪೋಹಗಳಿಗೂ ಕಿವಿಗೊಡುವ ಅಗತ್ಯವಿಲ್ಲ. ಪೂರ್ಣ ಐದು ವರ್ಷ ನಮ್ಮ ಪಕ್ಷವೇ ಅಧಿಕಾರ ನಡೆಸಲಿದೆ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿರಲಿದ್ದೇನೆ, ಮಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ಏನೇ ತೀರ್ಮಾನವಾದರು ಅದು ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ಆಗುತ್ತದೆ. ಡಿಸಿಎಂ ವಿಚಾರ ತೀರ್ಮಾನ ಮಾಡೋದು ಕೂಡ ಹೈಕಮಾಂಡ್ ಎಂದರು.
ರಮೇಶ್ ಜಾರಕಿಹೊಳಿ ಸರ್ಕಾರ ಬೀಳುತ್ತೆ ಎನ್ನುವ ಹೇಳಿಕೆ ಬಗ್ಗೆ ಪ್ರಸ್ತಾಪಿಸಿ, ಅವರು ಸೋತಿದ್ದಾರೆ, ಬೇರೆ ಕೆಲಸ ಇಲ್ಲದೆ ಬಾಯಿಗೆ ಬಂದಂಗೆ ಮಾತನಾಡುತ್ತಾರೆ ಎಂದರು. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ಐದು ವರ್ಷ ಸುಭದ್ರ ಸರ್ಕಾರ ಕೊಡುತ್ತೇವೆ. ಬಿಜೆಪಿಯವರು ಭ್ರಮ ನಿರಸರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
‘ಕೆಲಸ ಇಲ್ಲದೇ ಇರೋರು ಸಿಎಂ ಬದಲಾವಣೆ ವಿಚಾರ ಮಾತನಾಡುತ್ತಾರೆ. ಅವರಿಗೆ ಮಾಡೋಕೆ ಬೇರೆ ಕೆಲಸ ಇಲ್ಲಾ. ಹೀಗಾಗಿ ಮಾತನಾಡುತ್ತಾರೆ’ ಎಂದರು. ಆರು ತಿಂಗಳಲ್ಲಿ ಸರ್ಕಾರ ಪತನವಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಗಲು ಕನಸು ಕಾಣುತ್ತಿದ್ದಾರೆ. ಅವರ ಮಾತಿಗೆ ಬೆಲೆ ನೀಡುವ ಅಗತ್ಯವಿಲ್ಲ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಹೇಳಿದರು.
Comments are closed.