ಮಂಗಳೂರು, ಆ.01 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವತಿಯಿಂದ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ‘ಸಮಾನತೆ ಮತ್ತು ನ್ಯಾಯಕ್ಕಾಗಿ ನಾಗರಿಕ ಹಕ್ಕೊತ್ತಾಯ’ ನಡೆಯಿತು.
ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಲತೀಫ್ ಪುತ್ತೂರು ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲಾ ಪ್ರಜೆಗಳಿಗೂ ಸಮಾನ ರೀತಿಯಲ್ಲಿ ತಮ್ಮ ಹಕ್ಕುಗಳನ್ನು ಚಲಾಯಿಸಲು ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ಹಕ್ಕುಗಳಿಗೆ ಚ್ಯುತಿಯಾದಾಗ ಆತನಿಗೆ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವನ್ನು ನೀಡಲಾಗಿದೆ. ಆದರೆ, ಯಾಕೂಬ್ ಮೆಮನ್ ಪ್ರಕರಣದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯವು ನೀಡಿದ ತೀರ್ಪು ನ್ಯಾಯಾಂಗ ವ್ಯವಸ್ಥೆಯಲ್ಲಿ ‘ಸಮಾನತೆ ಮತ್ತು ನ್ಯಾಯ’ ಪ್ರಶ್ನೆಯಾಗಿ ಉಳಿಯುವಂತೆ ಮಾಡಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಪಾಧ್ಯಕ್ಷ ಅತಾವುಲ್ಲಾ ಜೋಕಟ್ಟೆ ,ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಕೂಸಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವಾಝ್ ಉಳ್ಳಾಲ್, ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಕೋಶಾಧಿಕಾರಿ ಐಎಂಆರ್ ಇಕ್ಬಾಲ್ ಮೊದಲಾದವರು ಉಪಸ್ಥಿತರಿದ್ದರು.