ರಾಷ್ಟ್ರೀಯ

ಪಿಎಚ್‌ಡಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ವಿವಿ ಕುಲಪತಿ ರಾಜಿನಾಮೆಗೆ ರಾಹುಲ್ ಆಗ್ರಹ

Pinterest LinkedIn Tumblr

rahul13ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ವಿವಿ ಕುಲಪತಿ ಪಿ.ಅಪ್ಪಾ ರಾವ್ ಅವರು ರಾಜಿನಾಮೆ ನೀಡಬೇಕು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಒತ್ತಾಯಿಸಿದ್ದಾರೆ.

ಇಂದು ವಿವಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಾಗೂ ಆತ್ಮಹತ್ಯೆ ಮಾಡಿಕೊಂಡ ರೋಹಿತ್ ತಾಯಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ರಾಹುಲ್ ಗಾಂಧಿ, ಪ್ರಕರಣ ಸಂಬಂಧ ಕುಲಪತಿ ಹಾಗೂ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಅವರ ವಿರುದ್ಧ ತೀವ್ರ ಅಸಮಾಧನ ವ್ಯಕ್ತಪಡಿಸಿದರು. ಕೇಂದ್ರ ಸಚಿವರು ಹಾಗೂ ಕುಲಪತಿಗಳು ರೋಹಿತ್ ಆತ್ಮಹತ್ಯೆ ಮಾಡಿಕೊಳ್ಳುವಂತ ಪರಿಸ್ಥಿತಿ ನಿರ್ಮಾಣ ಮಾಡಿದ್ದರು ಎಂದು ಆರೋಪಿಸಿದರು. ಅಲ್ಲದೆ ರೋಹಿತ್ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ತಾಯಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಬೇಕು ಎಂಬ ಕನಿಷ್ಠ ಜ್ಞಾನವೂ ಕುಲಪತಿಯವರಿಗೆ ಇಲ್ಲ. ಹೀಗಾಗಿ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯು ಯೋಗ್ಯತೆ ಇಲ್ಲ. ಈ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲದಿದ್ದರೆ ಅವರನ್ನು ವಜಾಗೊಳಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದರು.

ಇದೇ ವೇಳೆ ಜಾತಿ ಆಧಾರದಲ್ಲಿ ವಿದ್ಯಾರ್ಥಿಗಳನ್ನು ಬೇರೆ ಬೇರೆ ಮಾಡಬೇಡಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ಮನವಿ ಮಾಡಿದರು.

Write A Comment