ನವದೆಹಲಿ (ಪಿಟಿಐ): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ. ಆದರೆ, ವಿಚಾರಣೆಗೆ ಖುದ್ದು ಹಾಜರಿಯಿಂದ ಸೋನಿಯಾ ಮತ್ತು ರಾಹುಲ್ ಗಾಂಧಿಗೆ ವಿನಾಯ್ತಿ ನೀಡಿದೆ.
ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಶುಕ್ರವಾರ ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.
ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಬೇಕು ಎನ್ನುವ ಅರ್ಜಿದಾರರ ಮನವಿಯನ್ನು ಸುಪ್ರೀಂ ಪುರಸ್ಕರಿಸಿರುವುದರಿಂದ ಸದ್ಯಕ್ಕೆ ಸೋನಿಯಾ ಮತ್ತು ರಾಹುಲ್ ಗಾಂಧಿ ನಿರಾಳರಾಗಿದ್ದಾರೆ.
ಫೆ.20ರಂದು ದೆಹಲಿ ಹೈಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆಗೆ ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಬಾರದು ಎಂದು ದೂರುದಾರ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು.
ಆದರೆ, ನ್ಯಾಯಮೂರ್ತಿಗಳಾದ ಜೆ.ಎಸ್. ಖೇಹರ್ ಮತ್ತು ಸಿ. ನಾಗಪ್ಪನ್ ಅವರನ್ನೊಳಗೊಂಡ ಪೀಠ ಇದನ್ನು ತಳ್ಳಿ ಹಾಕಿತು. ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿದರೂ, ವಿಚಾರಣೆಯ ಯಾವುದೇ ಹಂತದಲ್ಲಿ ಅಗತ್ಯ ಬಿದ್ದರೆ ಖುದ್ದು ಹಾಜರಾಗುವಂತೆ ಸೋನಿಯಾ ಮತ್ತು ರಾಹುಲ್‌ಗೆ ವಿಚಾರಣಾ ನ್ಯಾಯಾಲಯ ಸೂಚಿಸಬಹುದು ಎಂದೂ ಪೀಠ ಅಭಿಪ್ರಾಯಪಟ್ಟಿತು.