ನವದೆಹಲಿ: ಭಾರತ ಹಾಗೂ ಇತರೆ ಏಳು ರಾಷ್ಟ್ರಗಳು ಇರಾನ್ ನಿಂದ ತೈಲ ಖರೀದಿಸಲು ಅಮೆರಿಕ ಶುಕ್ರವಾರ ಒಪ್ಪಿಗೆ ನೀಡಿದೆ.
ಭಾರತ, ಜಪಾನ್, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಎಂಟು ರಾಷ್ಟ್ರಗಳ ಮೇಲಿನ ನಿರ್ಬಂಧವನ್ನು ಅಮೆರಿಕ ಇಂದು ತೆರವುಗೊಳಿಸಿದ್ದು, ಉಳಿದ ರಾಷ್ಟ್ರಗಳು ಯಾವುದು ಎನ್ನುವ ಬಗ್ಗೆ ಇನ್ನಷ್ಟೆ ಮಾಹಿತಿ ಲಭ್ಯವಾಗಬೇಕಿದೆ.
ಅಮೆರಿಕ ವಿಧಿಸಿರುವ ನಿರ್ಬಂಧಗಳು ನವೆಂಬರ್ 4ರಿಂದ ಜಾರಿಗೆ ಬರಲಿದ್ದು, ನಿರ್ಬಂಧದ ನಂತರವೂ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಭಾರತ ಸೇರಿದಂತೆ ಎಂಟು ರಾಷ್ಟ್ರಗಳು ಅಮೆರಿಕಕ್ಕೆ ಒತ್ತಾಯಿಸಿದ್ದವು.
ಅಮೆರಿಕ ಇರಾನ್ ಮೇಲಿನ ನಿರ್ಬಂಧಗಳನ್ನು ಮರುಪರಿಶೀಲಿಸುವ ಮೂಲಕ ನವೆಂಬರ್ 4ರ ನಂತರವೂ ಇರಾನ್ ನಿಂದ ತೈಲ ಖರೀದಿಸಲು ಒಪ್ಪಿಗೆ ನೀಡಬೇಕು ಎಂಬ ಈ ರಾಷ್ಟ್ರಗಳ ಬೇಡಿಕೆ ಒಪ್ಪಿಕೊಂಡಿದೆ ಎಂದು ಟ್ರಂಪ್ ಆಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಹಿಂದೆ ತೈಲಕ್ಕಾಗಿ ಇರಾನ್ ಅನ್ನು ಅವಲಂಬಿಸಿರುವ ಭಾರತಕ್ಕೆ ಪರ್ಯಾಯ ಪೂರೈಕೆ ಮಾರ್ಗಗಳನ್ನು ಒದಗಿಸುವುದಾಗಿ ಟ್ರಂಪ್ ಆಡಳಿತದ ಅಧಿಕಾರಿಯೊಬ್ಬರು ಹೇಳಿದ್ದರು.
2015ರಲ್ಲಿ ಇರಾನ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದ್ದ ಅಮೆರಿಕ, ಅದು ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿ ಈ ವರ್ಷದ ಆರಂಭದಲ್ಲಿ ಮತ್ತೆ ನಿರ್ಬಂಧ ವಿಧಿಸಿತ್ತು.
ನಿರ್ಬಂಧದ ಮೊದಲ ಹಂತ ಈಗಾಗಲೇ ಜಾರಿಯಲ್ಲಿದ್ದು, ಅದು ನವೆಂಬರ್ 4ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಲಿದೆ. ಈ ಅವಧಿಯಲ್ಲಿ ಭಾರತ ಸೇರಿದಂತೆ ಎಲ್ಲ ದೇಶಗಳೂ ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣ ಸ್ಥಗಿತಗೊಳಿಸಲಿವೆ ಎಂದು ಅಮೆರಿಕ ನಿರೀಕ್ಷಿಸಿತ್ತು. ಆದರೆ ಅಂತಿಮವಾಗಿ ಭಾರತ ಇರಾನ್ ನಿಂದ ತೈಲ ಆಮದು ಮುಂದುವರೆಸಲು ಅವಕಾಶ ನೀಡಿದೆ.
Comments are closed.