ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಅಬ್ಬರ ಸತತ 14ನೇ ದಿನವೂ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8ರವರೆಗಿನ 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 47,262 ಪ್ರಕರಣಗಳು ಕಂಡು ಬಂದಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 275 ಮಂದಿ ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,60,441ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ನವೆಂಬರ್ 12 ರಂದು 47,905 ಮಂದಿ ಸೋಂಕು ಪೀಡಿತರಾಗಿದ್ದರು. ಅದಾದ ಬಳಿಕ ಸೋಮವಾರ 46,951, ಮಂಗಳವಾರ 46,951 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಇದು 131 ದಿನದಲ್ಲೇ ಗರಿಷ್ಠ ಪ್ರಮಾಣವಾಗಿದೆ. ಮತ್ತೊಂದೆಡೆ 24 ತಾಸುಗಳ ಅವಧಿಯಲ್ಲಿ ಸೋಂಕಿಗೆ 275 ಮಂದಿ ಸಾವಿಗೀಡಾಗಿರುವುದು 73 ದಿನಗಳಲ್ಲೇ ಗರಿಷ್ಠವಾಗಿದೆ.
ಹೊಸ ಸೋಂಕಿತರ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕು ಪೀಡಿತರ ಸಂಖ್ಯೆ 1,17,34,058ಕ್ಕೆ ಏರಿಕೆಯಾಗಿದೆ. ಈ ಪೈಕಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,68,457ಕ್ಕೆ ಏರಿಕೆಯಾಗಿದೆ. ಮೃತರ ಸಂಖ್ಯೆ 1,60,441ಕ್ಕೆ ಹೆಚ್ಚಳವಾಗಿದೆ. ಶೇ.98ರವರೆಗೂ ಇರುತ್ತಿದ್ದ ಚೇತರಿಕೆ ಪ್ರಮಾಣ ಇದೀಗ ಶೇ.95.75ಕ್ಕೆ ಇಳಿಕೆಯಾಗಿದೆ.
ಒಟ್ಟಾರೆ 1,17,34,058 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 23,907 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,12,05,160ಕ್ಕೆ ಏರಿಕೆಯಾಗಿದೆ.
ಇನ್ನು ಭಾರತದಲ್ಲಿ ಒಂದೇ ದಿನ 10,25,628 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 23,64,38,861 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ ಹಿರಿಯ ನಾಗರೀಕರಿಗೆ ಹಾಗೂ ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರಿಗೂ ಲಸಿಕೆ ನೀಡಲಾಗುತ್ತಿದೆ. .
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 5,08,41,286 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
Comments are closed.