ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಅಬ್ಬರ ಮುಂದುವರೆದಿದ್ದು, ಶುಕ್ರವಾರ ಬೆಳಿಗ್ಗೆ 8ರವರೆಗಿನ 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 59,118 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 154 ದಿನಗಳ ಬಳಿಕ ಅಂದರೆ ಕಳೆದ 5 ತಿಂಗಳ ಅವಧಿಯಲ್ಲೇ ಒಂದೇ ದಿನ ಇಷ್ಟೊಂದು ಮಂದಿಯಲ್ಲಿ ಸೋಂಕು ಕಾಣಸಿಕೊಳ್ಳುತ್ತಿರುವುದು ಇದೇ ಮೊದಲಾಗಿದೆ.
ಮತ್ತೊಂದೆಡೆ ಕೊರೋನಾ ಸೋಂಕಿಗೆ 257 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈ ವರೆಗೆ ಮಾರಕ ವೈರಾಣು ದಾಳಿಯಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 1,60,949ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,18,46,652ಕ್ಕೆ ತಲುಪಿದೆ.
ಮತ್ತೊಂದೆಡೆ ಸತತ 16ನೇ ದಿನವೂ ಸಕ್ರಿಯ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,21,066ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಬುಧವಾರ 47,262, ಗುರುವಾರ 53,476 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಶುಕ್ರವಾರರ ಸೋಂಕನ್ನೂ ಲೆಕ್ಕಕ್ಕೆ ತೆಗೆದುಕೊಂಡರೆ 3 ದಿನಗಳಲ್ಲಿ 1.5 ಲಕ್ಷಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾದಂತಾಗಿದೆ.
1,18,46,652 ಮಂದಿ ಒಟ್ಟಾರೆ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 32,987 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 1,12,64,637ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ ದಿನ 11,00,756 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 23,86,04,638 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ ಹಿರಿಯ ನಾಗರೀಕರಿಗೆ ಹಾಗೂ ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರಿಗೂ ಲಸಿಕೆ ನೀಡಲಾಗುತ್ತಿದೆ. .
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 5,55,04,440 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
Comments are closed.