ಮಂಗಳೂರು,ನ.೦6 : ತೀರ್ಥಹಳ್ಳಿಯ ಬಾಲಕಿ ನಂದಿತಾ ಸಾವು ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಆಗ್ರಹಿಸಿದರು.
ರಾಜ್ಯದಲ್ಲಿ ಇಂಥ ಅನೇಕ ಪ್ರಕರಣ ನಡೆಯುತ್ತಿದ್ದರೂ, ಸರಕಾರ ಕಣ್ಮುಚ್ಚಿ ಕುಳಿತಿದೆ. ಪೊಲೀಸ್ ಇಲಾಖೆ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸುವ ಹಂತಕ್ಕೆ ತಲುಪಿರುವುದು ವಿಪರ್ಯಾಸ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ತೀರ್ಥಹಳ್ಳಿ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು. ರಾಜ್ಯದಲ್ಲಿ ನಡೆದ ಅತ್ಯಾಚಾರ, ಕೊಲೆ, ಮಹಿಳಾ ದೌರ್ಜನ್ಯದಂತಹ ಸಮಗ್ರ ಮಾಹಿತಿಯನ್ನು ರಾಜ್ಯಪಾಲರಿಗೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜಕೀಯ ದ್ವೇಷಕ್ಕಾಗಿ ಹಿಂದು ಸಂಘಟನೆಗಳ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ದೌರ್ಜನ್ಯ ನಡೆಸಲಾಗುತ್ತಿದೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ಹೇಳಿದರು.
ಬಿಜೆಪಿ ಮುಖಂಡರಾದ ಕೆ.ಮೋನಪ್ಪ ಭಂಡಾರಿ, ಪುಷ್ಪಲತಾ ಗಟ್ಟಿ, ಸತೀಶ್ ಪ್ರಭು, ಕಿಶೋರ್ ರೈ, ಶಾಂತಾ ಆರ್., ರವಿಶಂಕರ ಮಿಜಾರು, ದಿವಾಕರ ಸಾಮಾನಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.