ಮಂಗಳೂರು, ಜೂನ್.1: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಜಿಲ್ಲಾ ಪೊಲೀಸ್ ಇಲಾಖೆ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ರೋಟರಿ ಕ್ಲಬ್ ಹಾಗೂ ವಕೀಲರ ಸಂಘ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಂಗಳವಾರ ವೆನ್‌ಲಾಕ್ ಆಸ್ಪತ್ರೆಯ ಆರ್‌ಎಪಿಸಿಸಿ ಸಭಾಂಗಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು, ವಿದ್ಯಾರ್ಥಿ ದೆಸೆಯಲ್ಲೇ ತಂಬಾಕು ಸೇರಿದಂತೆ ದುಶ್ಚಟಗಳಿಂದ ದೂರವಿದ್ದು, ಉತ್ತಮ ಆಶಯದೊಂದಿಗೆ ಜೀವನದ ಗುರಿ ತಲುಪಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ದುಶ್ಚಟಗಳಿಂದಾಗಿ ಯುವಕರು ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಬಗ್ಗೆ ವಿದ್ಯಾರ್ಥಿ ದೆಸೆಯಲ್ಲೇ ಜಾಗೃತರಾಗುವುದು ಅತೀ ಅಗತ್ಯ ಎಂದು ಅವರು ಹೇಳಿದರು.
ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಕ್ಷೀಣಿಸುತ್ತಿದ್ದರೆ, ಅಭಿವೃದ್ಧಿ ಹೊಂದುತ್ತಿರುವ ಭಾರತದಂತಹ ರಾಷ್ಟ್ರದಲ್ಲಿ ಈ ಚಟ ಹೆಚ್ಚುತ್ತಿದೆ. ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ತಂಬಾಕುಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಎಸ್.ಚೆಂಗಪ್ಪಮಾತನಾಡಿ, 5.4 ಮಿಲಿಯನ್ ಜನರು ತಂಬಾಕು ಉತ್ಪನ್ನಗಳ ಬಳಸುವವರಾಗಿದ್ದಾರೆ. ದೇಶದಲ್ಲಿ 8ರಿಂದ 10 ಲಕ್ಷ ಜನರು ತಂಬಾಕು ಉತ್ಪನ್ನಗಳ ಸೇವನೆ ಮಾಡಿ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದರು.
ಡಾ.ರಾಜೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯತ್ ಸಿಇಒ ಪಿ.ಐ. ಶ್ರೀವಿದ್ಯಾ, ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಸದಸ್ಯ ಕಾರ್ಯದರ್ಶಿ ಮಲ್ಲಣ್ಣ ಗೌಡ ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಕೃಷ್ಣ ರಾವ್, ವೆನ್ಲಾಕ್ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಮುಖ್ಯಸ್ಥ ಸಿ.ಎ.ಶಾಂತರಾಮ್ ಶೆಟ್ಟಿ, ಯೆನೆಪೊಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ ಎಂ.ವಿಜಯ ಕುಮಾರ್ ಇದ್ದರು. ಜಿಲ್ಲಾ ಕಾನೂನು ಸೇವೆ ಇಲಾಖೆಯ ಹಿರಿಯ ನ್ಯಾಯವಾದಿ ಎ.ಉದಯಾನಂದ, ಯೆನೆಪೊಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ವಿಜಯ ಕುಮಾರ್ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಹಾಗೂ ಕಾಯಿದೆ ಕುರಿತು ಉಪನ್ಯಾಸ ನೀಡಿದರು.
Comments are closed.