ಬೆಂಗಳೂರು, ಜು. 28 : ಮಹದಾಯಿ ನ್ಯಾಯಾಧೀಕರಣದ ತೀರ್ಪನ್ನು ಖಂಡಿಸಿ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಒಕ್ಕೂಟ ಶನಿವಾರ `ಕರ್ನಾಟಕ ಬಂದ್’ಗೆ ಕರೆ ನೀಡಿದ್ದು, ಇದಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಚಲನಚಿತ್ರೋದ್ಯಮ ಜಂಟಿಯಾಗಿ ಬೆಂಬಲ ನೀಡಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು ಮಹದಾಯಿ ನದಿಯಿಂದ 7.5 ಟಿಎಂಸಿ ನೀರು ಬಿಡುಗಡೆ ಮಾಡಬೇಕೆಂದು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಾಧೀಕರಣ ತಿರಸ್ಕರಿಸಿರುವುದರಿಂದ ರಾಜ್ಯದ ಜನತೆಯನ್ನು ಕೆರಳಿಸಿದೆ. ಇದರ ವಿರುದ್ಧ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಚಲನಚಿತ್ರೋದ್ಯಮ ಜಂಟಿಯಾಗಿ ಬಂದ್ ಆಚರಿಸಲು ತೀರ್ಮಾನಿಸಿವೆ.
ಶನಿವಾರ ನಡೆಸಲು ಉದ್ದೇಶಿಸಿರುವ ಕರ್ನಾಟಕ ಬಂದ್ ಯಶಸ್ವಿಗೆ ಸಹಕರಿಸುವಂತೆ ವಾಟಾಳ್ ನಾಗರಾಜ್ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಖಂಡಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ಶನಿವಾರದ ಬಂದ್ಗೆ ಕನ್ನಡ ಚಲನಚಿತ್ರೋದ್ಯಮ ಬೆಂಬಲ ನೀಡಲಿದ್ದು, ಅಂದು ಉದ್ಯಮದ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ತಿಳಿಸಿದ್ದಾರೆ.
ನ್ಯಾಯಾಧೀಕರಣದ ತೀರ್ಪನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಇದಕ್ಕೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕ ಬೆಂಬಲ ದೊರೆತಿದೆ. ಬಯಲುಸೀಮೆ ಜಿಲ್ಲೆಗಳಾದ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಮುಂತಾದ ಕಡೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಧ್ಯಂತರ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಬಿಜೆಪಿ ಆಗ್ರಹ:
ಬೆಂಗಳೂರು: ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.ಮಹದಾಯಿ ನ್ಯಾಯಾಧೀಕರಣ ನೀಡಿರುವ ಮಧ್ಯಂತರ ತೀರ್ಪು ನ್ಯಾಯಾಧೀಕರಣ ರಚನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಹಾಗಾಗಿ ಕಾನೂನಾತ್ಮಕ ಹೋರಾಟದ ಮೂಲಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎಂದು ರಾಜ್ಯದ ಮಾಜಿ ಜಲಸಂಪನ್ಮೂಲ ಸಚಿವ ಹಾಗೂ ಬಿಜೆಪಿ ಶಾಸಕ ಬಸವರಾಜಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿಂದು ಹೇಳಿದ್ದಾರೆ.
ಮಹದಾಯಿ ನ್ಯಾಯಾಧೀಕರಣ ನೀಡಿರುವ ತೀರ್ಪಿನಲ್ಲಿ ಹಲವು ಲೋಪಗಳಿವೆ. ಇವುಗಳನ್ನೆಲ್ಲಾ ಗಣನೆಗೆ ತೆಗೆದುಕೊಂಡು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಕೂಡಲೇ ಮುಂದಾಗಬೇಕು. ವಿಳಂಬ ಮಾಡುವುದು ಬೇಡ. ಮಹದಾಯಿ ನ್ಯಾಯಾಧೀಕರಣದ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಸರ್ವಪಕ್ಷ ಸಭೆಯನ್ನು ಕರೆದು ಕಾನೂನಾತ್ಮಕ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದರು. ಎಂದು ಅವರು ಹೇಳಿದ್ದಾರೆ.
ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರಮೋದಿಯವರನ್ನು ಬಿಜೆಪಿ ನಿಯೋಗ ಭೇಟಿಯಾಗಿದ್ದ ಸಂದರ್ಭದಲ್ಲಿ ಪ್ರಧಾನಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ವಿಚಾರದಲ್ಲಿ ನಾನು ಮಧ್ಯ ಪ್ರವೇಶ ಮಾಡುವುದಕ್ಕಿಂತ ಸಮಸ್ಯೆ ಬಗೆಹರಿಸಲು ಬಯಸಿದ್ದೇನೆ. ಗುಜರಾತ್ ನಲ್ಲಿ ಕಹಿ ಅನುಭವ ನನಗಾಗಿದೆ ಎಂದು ಸ್ಪಷ್ಟವಾಗಿ ಹೇಳಿದರು. ಪ್ರಧಾನಿ ಮಾತುಗಳಿಗೆ ಪೂರಕವಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೇ ಇದ್ದದ್ದು ರಾಜ್ಯಕ್ಕೆ ನ್ಯಾಯಾಧೀಕರಣದಲ್ಲಿ ಹಿನ್ನಡೆಯಾಗಲು ಕಾರಣವಾಯಿತು ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
Comments are closed.