ಕೇಶವ
ಮಂಗಳೂರು, ಡಿಸೆಂಬರ್.26: ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎ.ಅಬ್ದುಲ್ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿಗೆ ಅಪರಿಚಿತ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಪರಾರಿಯಾದ ಘಟನೆ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ಸಂಜೆ ನಡೆದಿದ್ದು, ಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಚೂರಿ ಇರಿತಕ್ಕೊಳಕ್ಕಾದ ವ್ಯಕ್ತಿಯನ್ನು ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎ.ಅಬ್ದುಲ್ ಜಲೀಲ್ ಕರೋಪಾಡಿ ಕೊಲೆ ಆರೋಪಿ ವೀರಕಂಭ ನಿವಾಸಿ ಕೇಶವ ಎಂದು ತಿಳಿದು ಹೆಸರಿಸಲಾಗಿದೆ.
ಅಬ್ದುಲ್ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿಯಾಗಿರುವ ಕೇಶವ ಕೆಲವು ದಿನಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.
ಇಂದು ಸಂಜೆ ಕಲ್ಲಡ್ಕದ ಪಂಚವಟಿ ಕಟ್ಟಡದ ಬಳಿ ನಿಂತಿದ್ದ ವೇಳೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.ಚೂರಿ ಇರಿತದಿಂದ ಕೇಶವರಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮ ಕೈಗೊಂಡಿದ್ದಾರೆ.
ಬಸ್‌ಗೆ ಕಲ್ಲು ತೂರಾಟ : ಬಿಗಿ ಪೊಲೀಸ್ ಬಂದೋಬಸ್ತ್
ಚೂರಿ ಇರಿತದ ಘಟನೆಯ ಬಳಿಕ ಕಲ್ಲಡ್ಕ ಕೆಳಗಿನ ಪೇಟೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಖಾಸಗಿ ಬಸ್‌ಗೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಕಲ್ಲಡ್ಕ ಪರಿಸರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕಲ್ಲಡ್ಕ ಕೆಳಗಿನ ಪೇಟೆಯಲ್ಲಿರುವ ಆರೆಸ್ಸೆಸ್ ಮುಖಂಡ ಪ್ರಭಾಕರ್ ಭಟ್ ಮನೆಯ ಎದುರು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಲ್ಲು ತೂರಾಟದಿಂದ ಬಸ್ನ ಗಾಜಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಿಂದ ಕಲ್ಲಡ್ಕದ ಮೇಲಿನ ಹಾಗೂ ಕೆಳಗಿನ ಪೇಟೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮಾಲಕರು ಸ್ವಯಂ ಆಗಿ ಬಂದ್ ಮಾಡಿ ಮನೆಗೆ ತೆರಳಿದ್ದಾರೆ. ಕೆಲವು ತಿಂಗಳ ಹಿಂದೆ ಕೋಮು ಗಲಭೆಯಿಂದ ತತ್ತರಿಸಿ ಹೋಗಿದ್ದ ಕಲ್ಲಡ್ಕದಲ್ಲಿ ಮತ್ತೆ ಅಶಾಂತಿಯ ವಾತಾವರಣ ನಿರ್ಮಾಣವಾಗಿರುವುದರಿಂದ ಕಲ್ಲಡ್ಕದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಬಂಟ್ವಾಳ ನಗರ, ಗ್ರಾಮಾಂತರ, ವಿಟ್ಲ, ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಲಾಗಿದೆ. ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Comments are closed.