ಕರಾವಳಿ

ದ.ಕ.ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ನಾಗಾಲ್ಯಾಂಡ್ ರಾಜ್ಯಪಾಲರಿಂದ ಚಾಲನೆ

Pinterest LinkedIn Tumblr

ಮಂಗಳೂರು, ಜುಲೈ.01: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಂಗಳೂರು ಪ್ರೆಸ್ ಕ್ಲಬ್ ಮತ್ತು ಮಂಗಳೂರು ಪತ್ರಿಕಾಭವನ ಟ್ರಸ್ಟ್ ಸಹಕಾರದೊಂದಿಗೆ ಹಮ್ಮಿಕೊಳ್ಳಲಾದ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ಇಂದು ಬೆಳಗ್ಗೆ ನಗರದ ಪುರಭವನದಲ್ಲಿ ಚಾಲನೆ ನೀಡಲಾಯಿತು.

ಕುದ್ಮುಲ್ ರಂಗರಾವ್ ಪುರಭವನದ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ವೇದಿಕೆಯಲ್ಲಿ ಆಯೋಜಿಸಲಾದ ಸಮ್ಮೇಳನವನ್ನು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ. ಆಚಾರ್ಯ ಉದ್ಘಾಟಿಸಿದರು. ಹಿರಿಯ ಪತ್ರಕರ್ತ ಈಶ್ವರ ದೈತೋಟ ಸಮ್ಮೇಳನಾಧ್ಯಕ್ಷತೆಯನ್ನು ವಹಿಸಿದ್ದರು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸ್ಮರಣ ಸಂಚಿಕೆ ‘ಸಮಾಚಾರ’ ಬಿಡುಗಡೆಗೊಳಿಸಿದರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಪುಸ್ತಕ ಪ್ರದರ್ಶನವನ್ನು ಉದ್ಘಾಟಿದರು. ಮಂಗಳೂರು ಉತ್ತರ ಕ್ಷೇತ್ರದ ಶಾಸಕ ವೈ. ಭರತ್ ಶೆಟ್ಟಿ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿದರುವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಭೃಂಗೇಶ್, ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಮುಖ್ಯಅತಿಥಿಗಳಾಗಿದ್ದರು.

ಕಾರ್ಯಕ್ರಮದಲ್ಲಿ ಸಮ್ಮೇಳನದ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ , ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಮುಂತಾದವರು ಉಪಸ್ಥಿತರಿದ್ದರು.

ಗೋಷ್ಠಿಗಳು:

ಪೂರ್ವಾಹ್ನ 11.15ರಿಂದ 12 ಗಂಟೆಯವರೆಗೆ ಮಾಧ್ಯಮ ಹಾಗೂ ಸಾಮಾಜಿಕ ಜವಾಬ್ದಾರಿ ಕುರಿತಂತೆ ಹಾಗೂ 12ರಿಂದ 1 ಗಂಟೆಯವರೆಗೆ ತುಳು ಸಿನಿಮಾ ಹಾಗೂ ಮಾಧ್ಯಮ ವಿಷಯದ ಕುರಿತಂತೆ ಗೋಷ್ಠಿಗಳು ನಡೆಯಿತು.

ಮಧ್ಯಾಹ್ನ 2ರಿಂದ 3ರವರೆಗೆ ನಾನಾ ಪತ್ರಿಕೆ, ಟಿವಿ ವಾಹಿನಿಗಳ ಮುಖ್ಯಸ್ಥರೊಂದಿಗೆ ಬ್ರ್ಯಾಂಡ್ ಮಂಗಳೂರು ಸಂವಾದ ಕಾರ್ಯಕ್ರಮ ನಡೆಯಲಿದೆ.

ಸಮ್ಮೇಳನದ ಅಂಗವಾಗಿ ಪುರಭವನದ ಪ್ರವೇಶ ದ್ವಾರಗಳನ್ನು ಅಲಂಕಾರ ಮಾಡಲಾಗಿದೆ. ಇಕ್ಕೆಲದಲ್ಲಿಯೂ ಸ್ವಾಗತ ಕಮಾನು ಹಾಕಲಾಗಿದೆ. ಪ್ರಧಾನ ದ್ವಾರವನ್ನು ವಿಭಿನ್ನವಾಗಿ ಅಲಂಕರಿಸಲಾಗಿದ್ದು, ಮಿನಿವಿಧಾನಸೌಧಲ್ಲಿ ಚಿತ್ರಕಲಾ, ಕಾರ್ಟೂನ್, ಛಾಯಾಚಿತ್ರ ಪ್ರದರ್ಶನದ ವ್ಯವಸ್ಥೆ ಮಾಡಲಾಗಿದೆ.

ಗಣ್ಯರು, ಪ್ರತಿನಿಧಿಗಳು, ವಿದ್ಯಾರ್ಥಿಗಳಿಗೆ ನೋಂದಣಿ, ಊಟ-ಉಪಹಾರಕ್ಕೆ ಪ್ರತ್ಯೇಕ ವ್ಯವಸ್ಥೆ ಸಿದ್ಧಗೊಳಿಸಲಾಗಿದೆ. ಸಮ್ಮೇಳನದ ಇಡೀ ದಿನದಲ್ಲಿ ಗಣ್ಯರು, ಪತ್ರಕರ್ತರು, ವಿದ್ಯಾರ್ಥಿಗಳು, ಮಾಧ್ಯಮಾಭಿಮಾನಿಗಳು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದೆ.

ಸಾಂಸ್ಕೃತಿಕ ಕಾರ್ಯಕ್ರಮ:

ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಪತ್ರಕರ್ತ ದಯಾನಂದ ಕುಡುಪು ಮತ್ತು ಬಳಗದವರಿಂದ ಸ್ಯಾಕ್ಸೋಫೋನ್ ಹಾಗೂ ಮಧ್ಯಾಹ್ನ ಮುರಳೀಧರ ಕಾಮತ್ ಹಾಗೂ ತಂಡದಿಂದ ಸುಗಮ ಸಂಗೀತ ನೆರವೇರಿತು.

ಸಂಜೆ ಸಮಾರೋಪ ಸಮಾರಂಭ : 

ಸಂಜೆ 4ರಿಂದ 5 ಗಂಟೆಯವರೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ವಿಶ್ರಾಂತ ಕುಲಪತಿ, ಸಾಹಿತಿ ಪ್ರೆ.ಬಿ.ಎ.ವಿವೇಕ ರೈ ಸಮಾರೋಪ ಭಾಷಣ ಮಾಡಲಿದ್ದಾರೆ. ಹಿರಿಯ ಪತ್ರಕರ್ತ ಈಶ್ವರ ದೈತೋಟ ಅಧ್ಯಕ್ಷತೆ ವಹಿಸಲಿದ್ದಾರೆ.  ಇದೇ ಸಂದರ್ಭ ಹಿರಿಯ ಪತ್ರಕರ್ತರಿಗೆ ಸನ್ಮಾನ, ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ನಡೆಯಲಿದೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ, ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಕಮಲ್ ಪಂಥ್, ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್, ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೆ.ಪಿ.ಎಸ್.ಯಡಪಡಿತ್ತಾಯ, ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ದ.ಕ.ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ ಭಾಗವಹಿಸಲಿದ್ದಾರೆ.

Comments are closed.