ಉಡುಪಿ: ಉಡುಪಿ ಜಿಲ್ಲೆಯ 7 ನೇ ಆರ್ಥಿಕ ಗಣತಿಯ ಕ್ಷೇತ್ರ ಕಾರ್ಯಾಚರಣೆಗೆ ಮೊಬೈಲ್ ಆ್ಯಪ್ ಮುಖಾಂತರ ಜಿಲ್ಲಾಧಿಕಾರಿ ಜಿ ಜಗದೀಶ್ ಚಾಲನೆ ನೀಡಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತೀ ಐದು ವರ್ಷಗಳಿಗೊಮ್ಮೆ ದೇಶದಾದ್ಯಂತ ಆರ್ಥಿಕ ಗಣತಿಯನ್ನು ಕೈಗೊಳ್ಳಲಾಗುತ್ತಿದ್ದು, ಈ ಬಾರಿ 7 ನೇ ಆರ್ಥಿಕ ಗಣತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಇಂಡಿಯಾ ಕಾರ್ಯಕ್ರಮದಡಿ ಮೊಬೈಲ್ ಆ್ಯಪ್ ಮೂಲಕ ಆರ್ಥಿಕ ಗಣತಿ ಕಾರ್ಯವನ್ನು ನಿರ್ವಹಿಸಲಾಗುತ್ತದೆ ಎಂದು ಹೇಳಿದರು.
ಆರ್ಥಿಕ ಗಣತಿಯನ್ನು ಇ-ಆಡಳಿತ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾನ್ಯ ಸೇವಾ ಕೇಂದ್ರ(ಸಿಎಸ್‍ಸಿ)ಗಳ ಮುಖಾಂತರ ನಡೆಸಲಾಗುತ್ತಿದ್ದು, ಈ ಯೋಜನೆಯಡಿ ನಿಯೋಜಿಸುವ ಗಣತಿದಾರರ ಮೂಲಕ ಅವರ ಕಾರ್ಯವ್ಯಾಪ್ತಿಯಲ್ಲಿ ಬರುವ ಪ್ರತಿ ಮನೆ, ಕಟ್ಟಡಗಳಿಗೆ ಭೇಟಿ ನೀಡಿ ಅಲ್ಲಿ ನಡೆಯುವ ಉದ್ಯಮ, ವ್ಯಾಪಾರ, ಸೇವೆಗಳು ಇತ್ಯಾದಿ ಆರ್ಥಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಸಾರ್ವಜನಿಕರು ನಿಖರ ಹಾಗೂ ಅವಶ್ಯಕ ಮಾಹಿತಿ ನೀಡಿ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಆರ್ಥಿಕ ಗಣತಿ ಯೋಜನೆಯು ದೇಶದ ಆರ್ಥಿಕ ವ್ಯವಸ್ಥೆಗೆ ಸಂಬಂಧಿಸಿದ ಗಣತಿಯಾಗಿದ್ದು, ಆರ್ಥಿಕ ಗಣತಿಗೂ ಸಿಎಎ-ಎನ್‍ಆರ್‍ಸಿ ಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಖ್ಯೆ ಸಂಗ್ರಹಣಾಧಿಕಾರಿ ನಾಗರಾಜ್ ರಾವ್ ಉಪಸ್ಥಿತರಿದ್ದರು.
Comments are closed.