ಕರಾವಳಿ

ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ : ಸಚಿವ ಕೋಟ ಶ್ರೀನಿವಾಸ ಪೂಜಾರಿ

Pinterest LinkedIn Tumblr

ಮಂಗಳೂರು: ಕರಾವಳಿ ಜಿಲ್ಲೆಯ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಮಾ.7 ಮತ್ತು 8ರಂದು ನಡೆಯುವ ರಾಜ್ಯ ಪತ್ರಕರ್ತರ ಸಮ್ಮೇಳನದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಈ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿಮಾತನಾಡಿದ ಸಚಿವ ಶ್ರೀನಿವಾಸ ಪೂಜಾರಿ, ಆಹಾರ, ವಸತಿ ಹಾಗೂ ಸಾರಿಗೆ ವ್ಯವಸ್ಥೆ ಯನ್ನುಸಮರ್ಪಕವಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಫೆ.28ರಂದುಬೆಳಗ್ಗೆ 10 ಗಂಟೆಗೆ ಜಿಲ್ಲೆೆಯ ಎಲ್ಲ ಶಾಸಕರು ಹಾಗೂ ಅಧಿಕಾರಿಗಳ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ರಾಜ್ಯ ಸಂಘದಲ್ಲಿ ನೋಂದಣಿಯಾಗಿರುವ 7 ಸಾವಿರ ಪತ್ರಕರ್ತರ ಪೈಕಿ ಮೂರು ಸಾವಿರ ಮಂದಿ ಸಮ್ಮೇಳನಕ್ಕೆ ಹಾಜರಾಗುವ ಸಾಧ್ಯತೆ ಇದೆ. ಈ ಮೊದಲಿನ ಎಲ್ಲ ಸಮ್ಮೇಳನಗಳನ್ನು ಆಯಾ ಜಿಲ್ಲಾಡಳಿತಗಳ ನೆರವಿನಲ್ಲಿ ನೆರವೇರಿಸಲಾಗಿದೆ. ಇಲ್ಲಿ ಕೂಡ ಜಿಲ್ಲಾಡಳಿತದ ನೆರವಿನಲ್ಲಿ ಸಮ್ಮೇಳನವನ್ನು ಯಶಸ್ಸುಗೊಳಿಸುವ ವಿಶ್ವಾಸವಿದೆ. ಈ ಸಮ್ಮೇಳನ ವಿಭಿನ್ನವಾಗಿ ನಡೆಯಲಿದ್ದು, ರಾಜ್ಯ ಮಾತ್ರವಲ್ಲದೆ, ನೇಪಾಳ, ಶ್ರೀಲಂಕಾ, ಬಾಂಗ್ಲಾ  ಮುಂಬೈ ಹಾಗೂ ದೆಹಲಿಗಳಿಂದಲೂ ಪ್ರತಿನಿಧಿಗಳು ಆಗಮಿಸಲಿದ್ದಾರೆ. ಸಮ್ಮೇಳನದಲ್ಲಿ  ಸುಮಾರು 50 ಮಂದಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು.

ಪತ್ರಕರ್ತರ ಸಮ್ಮೇಳನ ಯಶಸ್ವಿ ಆಗಿ ನಡೆಸಲು ವಿವಿಧ ಸಮಿತಿ ಗಳನ್ನು ರಚಿಸಲಾಗಿದೆ .ಸಮ್ಮೇಳನದಲ್ಲಿ ಭಾಗವಹಿಸುವ ಪತ್ರಕರ್ತರಿಗೆ ಕರಾವಳಿಯ ಪ್ರವಾಸಿ ತಾಣ ಗಳಿಗೆ ಒಂದು ದಿನದ ಪ್ರವಾಸ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪ್ರವಾಸೋದ್ಯಮ ಸೇರಿದಂತೆ ಕರಾವಳಿಯ ಅಭಿವೃದ್ಧಿ ಕುರಿತು ಸಮ್ಮೇಳನದಲ್ಲಿ ವಿಚಾರ ಗೋಷ್ಠಿ ನಡೆಯಲಿದ್ದು ವಿವಿಧ ಕ್ಷೇತ್ರದ ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಶಿವಾನಂದ ತಗಡೂರು ತಿಳಿಸಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ,ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀಮತಿ ಎಂ ಜೆ ರೂಪಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ರಾಜೇಶ್, ವಾರ್ತಾಧಿಕಾರಿ ಖಾದರ್ ಶಾ ,ಸಮ್ಮೇಳನದ ಸಂಚಾಲಕ ಜಗನಾಥ್ ಶೆಟ್ಟಿ ಬಾಳ, ಜಿಲ್ಲಾ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಉಪಸ್ಥಿತರಿದ್ದರು.

Comments are closed.