ಕರಾವಳಿ

ನಾಳೆ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಹಕಾರ ರತ್ನ ಡಾ| ಎಂ.ಎನ್. ಆರ್ ಅವರಿಗೆ ಅಭಿನಂದನೆ

Pinterest LinkedIn Tumblr

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ರಂಗದ ಅಗ್ರಮಾನ್ಯ ನಾಯಕರಾಗಿ ರಾಜ್ಯ-ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾಗಿ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಗೊಂಡಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರ.

ಅವರ ಈ ಸಾಧನೆಯನ್ನು ಜಿಲ್ಲೆಯ ಸಹಕಾರಿಗಳು ಸಂಭ್ರಮಿಸುವ ಉದ್ದೇಶದಿಂದ ಸೆಪ್ಟೆಂಬರ್ 24ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಮಧ್ಯಾಹ್ನ12 ಗಂಟೆಗೆ ಅಭಿನಂದನಾ ಸಮಾರಂಭವನ್ನು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ ಎಂದು ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅಭಿನಂದನಾ ಸಮಿತಿಯ ಪ್ರಮುಖರಾದ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದರು.

ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಇತಿಹಾಸದಲ್ಲಿ 1945ರ ನಂತರ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೊದಲ ಅಧ್ಯಕ್ಷರಾಗಿ 2017ರಲ್ಲಿ ಆಯ್ಕೆಗೊಂಡಿದ್ದ ಡಾ| ಎಂ.ಎನ್. ರಾಜೇಂದ್ರ ಕುಮಾರ್, ಇದೀಗ ಎರಡನೇ ಬಾರಿಯೂ ಈ ಪ್ರತಿಷ್ಠಿತ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಗೊಳ್ಳುವ ಮೂಲಕ ಇತಿಹಾಸವನ್ನು ನಿರ್ಮಿಸಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಧೀಮಂತ ಸಹಕಾರಿ ನಾಯಕರಲ್ಲಿ ಒಬ್ಬರಾಗಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರ ರಂಗದಲ್ಲಿ ಸುಮಾರು 50 ವರ್ಷಗಳ ಕಾಲ ಗುರುತಿಸಿಕೊಂಡು ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಅನುಪಮ ಸೇವೆಯನ್ನು ಗೈದಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಸುಮಾರು 28 ವರ್ಷಗಳ ಕಾಲ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲಿ ಸಾರ್ಥಕ ಸೇವೆಯನ್ನು ಗೈದಿರುವ ಇವರು ಬ್ಯಾಂಕಿನ ಸರ್ವಾಂಗೀಣ ಪ್ರಗತಿಯ ರೂವಾರಿಯಾಗಿರುತ್ತಾರೆ. ಸ್ಪರ್ಧಾತ್ಮಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನದ ಮೂಲಕ ಅತ್ಯಾಧುನಿಕ ಸೇವೆಯನ್ನು ಗ್ರಾಹಕರಿಗೆ ನೀಡಿ ಎಸ್‌ಸಿಡಿಸಿಸಿ ಬ್ಯಾಂಕನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕನ್ನಾಗಿ ರೂಪಿಸಿದ ಹೆಗ್ಗಳಿಕೆ ಇವರದು.

ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು1999ರಿಂದ ಇದುವರೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕರಾಗಿದ್ದು, ೨೦೦೫ರಿಂದ 2010ರವರೆಗೆ ಈ ಪ್ರತಿಷ್ಠಿತ ಬ್ಯಾಂಕಿನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿ ಬ್ಯಾಂಕಿನ ಸರ್ವಾಂಗೀಣ ಅಭಿವೃದ್ಧಿಯ ಪೂರಕ ಶಕ್ತಿಯಾಗಿ ಶ್ರಮಿಸಿದ್ದರು.

ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಮೆನೆಜಿಂಗ್ ಟ್ರಸ್ಟಿಯಾಗಿ ನವೋದಯ ಸ್ವ-ಸಹಾಯ ಸಂಘಗಳ ರಚನೆಯಲ್ಲಿ ಹಾಗೂ ಈ ಯೋಜನೆಯನ್ನು ವ್ಯಾಪಕವಾಗಿ ಅಂತರ್‌ಜಿಲ್ಲಾ ಮಟ್ಟದಲ್ಲಿ ಸಂಘಟಿಸಿದ ಶ್ರೇಯಸ್ಸು ಇವರದು. ನವೋದಯ ವಿವಿಧೋದ್ದೇಶ ಸಹಕಾರಿ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿರುವ ಇವರು ರಾಷ್ಟ್ರೀಯ ಸಹಕಾರಿ ಸಂಸ್ಥೆ ‘ಇಫ್ಕೋ’ ಇದರ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಮುಖ್ಯವಾಗಿ ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಮೂಲಕ ಹೊಸ ಆಯಾಮವನ್ನು ಈ ಕ್ಷೇತ್ರಕ್ಕೆ ನೀಡಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರಿಗಳೆಲ್ಲರ ಅಚ್ಚುಮೆಚ್ಚಿನ ನಾಯಕರಾಗಿ ಗುರುತಿಸಿಕೊಂಡಿರುವುದು ನಮಗೆಲ್ಲಾ ಅಭಿಮಾನವನ್ನು ತಂದಿದೆ. ಇಂತಹ ಅದ್ವಿತೀಯ ನಾಯಕನನ್ನು ನಾವೆಲ್ಲ ಸಂತೋಷದಿಂದ ಅಭಿನಂದಿಸುವುದು ನಮ್ಮ ಕರ್ತವ್ಯವೂ ಕೂಡಾ ಆಗಿದೆ.

ಈ ನಿಟ್ಟಿನಲ್ಲಿ ಸಮಸ್ತ ಸಹಕಾರಿ ಬಂಧುಗಳ ಸಮಕ್ಷಮದಲ್ಲಿ ದಿನಾಂಕ 24-09-2022ರಂದು ಮಧ್ಯಾಹ್ನ 12 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಭಾಭವನದಲ್ಲಿ ಅಭಿನಂದನಾ ಸಮಾರಂಭವನ್ನು ಅದ್ದೂರಿಯಿಂದ ಏರ್ಪಡಿಸಿರುತ್ತೇವೆ ಎಂದವರು ವಿವರ ನೀಡಿದರು.

ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರು ಮಾತನಾಡಿ, ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ಮಾನ್ಯ ರಾಜ್ಯಸಭಾ ಸದಸ್ಯರೂ ಆಗಿರುವ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿ, ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಲಿರುವರು ಎಂದು ತಿಳಿಸಿದರು.

ಸಮಾರಂಭದಲ್ಲಿ ಜಾಗತಿಕ ಬಂಟರ ಒಕ್ಕೂಟ ರಿ., ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಅಭಿನಂದನಾ ಭಾಷಣವನ್ನು ಮಾಡಲಿರುವರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ಶುಭಾಶಂಸನೆಗೈಯಲಿರುವರು. ಮುಖ್ಯ ಅತಿಥಿಗಳಾಗಿ ಸೌತ್ ಇಂಡಿಯಾ ಅದಾನಿ ಗ್ರೂಪ್ಸ್‌ನ ಅಧ್ಯಕ್ಷರಾದ ಶ್ರೀ ಕಿಶೋರ್ ಆಳ್ವ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕರಾದ ಶ್ರೀ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರು ಭಾಗವಹಿಸಲಿರುವರು.

ಅದ್ದೂರಿಯ ಸ್ವಾಗತ: ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳೂರಿಗೆ ದಿನಾಂಕ24-09-2022ರಂದು ಬೆಳಗ್ಗೆ ಗಂಟೆ10.30ಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲಿ ಇವರನ್ನು ಜಿಲ್ಲೆಯ ಸಮಸ್ತ ಸಹಕಾರಿಗಳೆಲ್ಲರೂ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಲಿರುವರು ಎಂದು ದೇವಿಪ್ರಸಾದ್ ಶೆಟ್ಟಿ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಕಾರ್ಯಾಧ್ಯಕ್ಷರಾದ ಭಾಸ್ಕರ್ ಎಸ್.ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಾಜು ಎಸ್. ಪೂಜಾರಿ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಬ್ಯಾಂಕಿನ ನಿರ್ದೇಶಕರುಗಳು ಹಾಗೂ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮುಂತಾದವರು ಉಪಸ್ಥಿತರಿದ್ದರು.

Comments are closed.