ಕರಾವಳಿ

ಡಿ.ಸಿ ಮನ್ನ ಜಾಗ ಅತಿಕ್ರಮಣ ಮಾಡಿದರೆ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

Pinterest LinkedIn Tumblr

ಮಂಗಳೂರು : ಡಿ.ಸಿ ಮನ್ನ ಜಾಗವನ್ನು ಅತಿಕ್ರಮಣ ಮಾಡಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಂಡು ಅದನ್ನು ಕೂಡಲೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಿಸಿ ಮನ್ನ ಜಾಗ ಅತಿಕ್ರಮಣ ಮಾಡುವುದು ಅಥವಾ ಅತಿಕ್ರಮ ಮಾಡಿ ಅಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಿದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ, ಅದನ್ನು ಸ್ಥಗಿತಗೊಳಿಸಬೇಕು, 192(ಎ) ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ಸ್ಮಿತಾ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಬಂಟ್ವಾಳ ತಾಲೂಕಿನ ಅಲ್ಲಿ ಪಾದೆಯಲ್ಲಿ ಡಿಸಿ ಮನ್ನಾ ಜಾಗವನ್ನು ಅತಿಕ್ರಮಣ ಮಾಡಿ ಕಟ್ಟಡ ಹಾಗೂ ವಾಮದಪದವಿನಲ್ಲಿ ಅಕ್ರಮವಾಗಿ ಮನೆಯನ್ನು ನಿರ್ಮಿಸಲಾಗಿದೆ ಎಂದು ಸಭೆಯಲ್ಲಿ ಜಿಲ್ಲಾ ದೌರ್ಜನ್ಯ ತಡೆ ಸಮಿತಿಯ ಸದಸ್ಯ ವಿಶ್ವನಾಥ್ ಚಿಂತಿಮಾರ್ ಸಭೆಯ ಗಮನಕ್ಕೆ ತಂದಾಗ ಜಿಲ್ಲಾಧಿಕಾರಿಯವರು ಈ ನಿರ್ದೇಶನ ನೀಡಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದ ಹಿತಾಸಕ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ವ್ಯಾಪ್ತಿಗೆ ಬರುವ ವಿಚಾರಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಲಾಗುತ್ತಿದೆ, ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳಿಗೆ ಸಂಬಂಧಿಸಿದವರು ಸಲ್ಲಿಸುವ ಮನವಿಯನ್ನು ಶಿಫಾರಸ್ಸು ಮಾಡಿ ಸರ್ಕಾರಕ್ಕೆ ಸಲ್ಲಿಸಲಾಗುತ್ತಿದೆ, ಜಿಲ್ಲೆಯಲ್ಲಿರುವ ಸರ್ಕಾರದ ವಿವಿಧ ಕಚೇರಿಗಳಲ್ಲಿ ಬಾಹ್ಯ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ ತಿಳಿಸಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿಯ ಸಭೆಗಳನ್ನು ಏರ್ಪಡಿಸುವ ಸರ್ಕಾರದ ಇಲಾಖೆಗಳು ಪೂರ್ವಭಾವಿಯಾಗಿ ಆಯಾ ಸಭೆಗಳನ್ನು ಪಟ್ಟಿ ಮಾಡಿಕೊಳ್ಳಬೇಕು, ಪ್ರಮುಖವಾಗಿ ಸಭೆಗಳಲ್ಲಿ ಚರ್ಚೆಯಾಗುವ ವಿಷಯಸೂಚಿಗಳನ್ನು ಸಂಘಟನೆಗಳು ಹಾಗೂ ಸಂಬಂಧಿಸಿದ ವ್ಯಕ್ತಿಗಳೊಂದಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಉಪ ನಿರ್ದೇಶಕರು ಸಭೆ ನಡೆಸಬೇಕು, ಅಂತೆಯೇ ವಿವಿಧ ಸಂಘಟನೆಗಳ ಮುಖ್ಯಸ್ಥರು ಹಾಗೂ ವ್ಯಕ್ತಿಗಳು ತಮ್ಮ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿಯಾಗಿ ಚರ್ಚಿಸಬೇಕು ಎಂದು ತಿಳಿಸಿದರು.

ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಹಾಗೂ ಶೌಚಾಲಯಗಳ ನಿರ್ಮಾಣಕ್ಕೆ ಅನುಕೂಲವಾಗುವಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನಿವೇಶನದ ಮಾಹಿತಿ ಒದಗಿಸಬೇಕು, ಪೌರಕಾರ್ಮಿಕರಿಗೆ ಪ್ರತಿ ತಿಂಗಳು 10ರೊಳಗೆ ವೇತನ ಪಾವತಿಸಿ, ಸಂಕಷ್ಟ ಭತ್ಯೆಯನ್ನು ನೀಡುವಂತೆ ಅವರು ಸೂಚಿಸಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಕಾನೂನು ಸುವ್ಯವಸ್ಥೆ ವಿಭಾಗದ ಎಸಿಪಿ ಅಂಕ್ಷು ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ ಬೇನಮಟ್ಟಿ, ಪರಿಶಿಷ್ಟ ವರ್ಗಗಳ ಇಲಾಖೆಯ ಅಧಿಕಾರಿ ರಶ್ಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಭಿಷೇಕ್, ತಹಶೀಲ್ದಾರ್ ಪುರಂದರ್ ಸೇರಿದಂತೆ ಆನ್ ಲೈನ್ ಮೂಲಕ ಎಲ್ಲಾ ತಾಲೂಕುಗಳ ತಹಶೀಲ್ದಾರರು, ಪ.ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಸಮಿತಿ ಸದಸ್ಯರಾದ ವಿಶ್ವನಾಥ್ ಚಿಂತಿಮಾರು, ರೇಶ್ಮ, ಪ್ರಸನ್ನ ದೇರಳಕಾಡು, ಜಿನ್ನಪ್ಪ ನಾಯ್ಕ, ರಮೇಶ್ ಮುಲ್ಕಿ ಹಾಗೂ ದಯಾನಂದ ಮುಲ್ಕಿ ಸೇರಿದಂತೆ ಇತರೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.