ನೆಲಮಂಗಲ,ಜೂ.5: ಅತಿವೇಗವಾಗಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ನುಗ್ಗಿ ಆ ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ನಾಯಿಮರಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಮೃತಪಟ್ಟವರನ್ನು ಜಾರ್ಖಂಡ್ ಮೂಲದವರೆಂದು ಹೇಳಲಾಗಿದ್ದು, ಬೆಂಗಳೂರಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ರಾತ್ರಿ ಹಿಮ್‌ರಾಜ್ ವರ್ಮ ಎಂಬುವರ ಹೆಸರಿನಲ್ಲಿ ಆನ್‌ಲೈನ್ ಮೂಲಕ ಕೆಎ03,ಎಬಿ7409 ನಂಬರಿನ ಕಾರನ್ನು ಬಾಡಿಗೆಗೆ ಪಡೆಯಲಾಗಿತ್ತು ಎಂದು ತಿಳಿದುಬಂದಿದೆ.
ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು ಬೆಳಗಿನ ಜಾವ 3.30ರ ವೇಳೆಯಲ್ಲಿ ಬೆಂಗಳೂರಿನಿಂದ ತುಮಕೂರು ಕಡೆಗೆ ಹೋಗುತ್ತಿದ್ದಾಗ ಕಾರು ಅತಿ ವೇಗವಿದ್ದುದರಿಂದ ದಾಮೋಜಿಪಾಳ್ಯದ ಗೇಟ್ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ಹಾದುಹೋಗಿ ಪಕ್ಕದ ರಸ್ತೆಗೆ ನುಗ್ಗಿದಾಗ ಈ ರಸ್ತೆಯಲ್ಲಿ ಎದುರಿನಿಂದ ಅತಿವೇಗವಾಗಿ ಬರುತ್ತಿದ್ದ ಲಾರಿಗೆ ಅಪ್ಪಳಿಸಿ ಕಾರು ಉರುಳಿದೆ. ಪರಿಣಾಮ ಕಾರಿನಲ್ಲಿದ್ದ ನಾಯಿಮರಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ನೆಲಮಂಗಲ ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿ ಕಾರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಎಲ್ಲರ ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಯಿತು. ಈ ಕಾರನ್ನು ಅಮಿತ್‌ಕುಮಾರ್(27) ಎಂಬಾತ ಚಲಾಯಿಸುತ್ತಿದ್ದನು ಎಂದು ತಿಳಿದುಬಂದಿದ್ದು, ಈ ನಾಲ್ವರು ಕಾರನ್ನು ಪಡೆದು ಎಲ್ಲಿಗೆ ಹೋಗುತ್ತಿದ್ದರು ಎಂಬ ಬಗ್ಗೆ ತಿಳಿದುಬಂದಿಲ್ಲ.
ನೆಲಮಂಗಲ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತಪಟ್ಟವರ ಹೆಸರು, ವಿಳಾಸ ಹಾಗೂ ಪೋಷಕರ ಪತ್ತೆಗೆ ತನಿಖೆ ಮುಂದುವರೆಸಿದ್ದಾರೆ. ಈ ಅಪಘಾತದಿಂದಾಗಿ ಈ ಮಾರ್ಗದಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ತದನಂತರ ಸಂಚಾರಿ ಠಾಣೆ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.