ಶಿವಮೊಗ್ಗ, ಆ.7-ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರದಲ್ಲಿ ನೇರವಾಗಿ ಸರ್ಕಾರದ ಪಾತ್ರವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಮ್ಮಕ್ಕಿದೆ ಎಂದು ಮೇಲ್ಮನೆ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಸಂಸ್ಥೆ ಕಳಂಕಿತ ಸಂಸ್ಥೆಯಾಗಿದೆ. ಜನರ ವಿಶ್ವಾಸ ಹಾಗೂ ನಂಬಿಕೆಯನ್ನು ಕಳೆದುಕೊಂಡಿದೆ. ಭ್ರಷ್ಟಾಚಾರದ ಕೂಪವಾಗಿರುವ ಆ ಸಂಸ್ಥೆಯಲ್ಲಿ ಸರ್ಕಾರದ ಪಾತ್ರವಿದೆ ಎಂದು ಅವರು ಆರೋಪಿಸಿದರು.ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್‌ರಾವ್ ಅವರು ಬಂಧನದ ಭೀತಿಯಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡದೆ ಭಂಡತನ ಪ್ರದರ್ಶಿಸುತ್ತಿದ್ದಾರೆ.
ಲಂಚ ಬೇಡಿಕೆ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಹಾಗೂ ಲೋಕಾಯುಕ್ತರ ನಿವಾಸದಲ್ಲಿಹಗರಣಗಳು ನಡೆದಿರುವುದು ಬೆಳಕಿಗೆ ಬಂದಿದ್ದರೂ ಇವರ ಪುತ್ರ ಅಶ್ವಿನ್ ರಾವ್ ಭಾಗಿಯಾಗಿ ಬಂಧನಕ್ಕೊಳಗಾಗಿದ್ದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದೆ ಮುಂದುವರೆದಿರುವುದು ನಾಚಿಕೆಗೇಡು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಸಾಲಬಾಧೆಯಿಂದ ನೂರಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಸರ್ಕಾರ ಸೂಕ್ತ ಪರಿಹಾರ ನೀಡುತ್ತಿಲ್ಲ. ಸರ್ಕಾರದ ಖಜಾನೆ ಖಾಲಿಯಾಗಿದೆ. ಸಚಿವರು ರೈತರ ಮನೆಗಳಿಗೆ ತೆರಳಿ ಸಾಂತ್ವನ ಹೇಳುತ್ತಿಲ್ಲ. ಸರ್ಕಾರ ರೈತ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು, ಬ್ಯಾಂಕ್‌ಗಳು ಕ್ರೂರವಾಗಿ ಸಾಲ ವಸೂಲಿ ಮಾಡುವ ಕ್ರಮವನ್ನು ಸ್ಥಗಿತಗೊಳಿಸಬೇಕು. ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುವಂತಾಗಬೇಕೆಂದು ಈಶ್ವರಪ್ಪ ಹೇಳಿದರು.ಇಂಧನ ಇಲಾಖೆಯಲ್ಲಿ 180ಕೋಟಿ ರೂ. ವೆಚ್ಚದಲ್ಲಿ 20 ಲಕ್ಷ ವಿದ್ಯುತ್ ಮೀಟರ್‌ಗಳನ್ನು ಖರೀದಿ ಮಾಡಲಾಗಿದ್ದು ಇದರಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿವೆ. ಎರಡು ಕಂಪನಿಗಳನ್ನು ವಿದ್ಯುತ್ ಮೀಟರ್ ಖರೀದಿ ಮಾಡಲಾಗಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಈವರೆಗೆ ಯಾವುದೇ ಕ್ರಮ ಕೈಗೊಳ್ಳದೆ, ಮತ್ತದೇ ಕಂಪನಿಗಳಿಂದ ಮೀಟರ್ ಖರೀದಿ ಮಾಡುತ್ತಿದ್ದಾರೆಂದು ಈಶ್ವರಪ್ಪ ಆರೋಪಿಸಿದ್ದಾರೆ.