ಬೆಂಗಳೂರು, ಆ.10-ರಾಜ್ಯದಲ್ಲಿ ಭೀಕರ ಬರಗಾಲ ತಲೆದೋರಿರುವ ಹಿನ್ನೆಲೆಯಲ್ಲಿ ಈ ಬಾರಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಈ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.ಸಭೆಯಲ್ಲಿ ಸಚಿವರಾದ ವಿ.ಶ್ರೀನಿವಾಸ್ ಪ್ರಸಾದ್, ಎಚ್.ಸಿ.ಮಹದೇವಪ್ಪ,
ಎಚ್.ಎಸ್.ಮಹದೇವಪ್ರಸಾದ್, ಆರ್.ವಿ.ದೇಶಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.ರಾಜ್ಯದ 100ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರಗಾಲ ಆವರಿಸಿರುವುದರಿಂದ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಬೇಕೆಂಬ ಮುಖ್ಯಮಂತ್ರಿಗಳ ಮನವಿಗೆ ಸಭೆಯಲ್ಲಿ ಭಾಗವಹಿಸಿದ್ದ ಸಚಿವರು ಮತ್ತು ಅಧಿಕಾರಿಗಳು ಸಮ್ಮತಿ ಸೂಚಿಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 1970ರ ನಂತರ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಕೆಲವು ಕಡೆ ಬಿತ್ತನೆಯಾಗಿಲ್ಲ. ಇನ್ನೂ ಕೆಲವು ಕಡೆ ಬಿತ್ತನೆಯಾದ ಬೆಳೆಗಳು ಒಣಗುತ್ತಿವೆ. ಈ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.ಇನ್ನು ಮೂರ್ನಾದಲ್ಕು ದಿನಗಳಲ್ಲಿ ದಸರಾ ಹಬ್ಬದ ಆಚರಣೆಯ ಸ್ವರೂಪವನ್ನು ತಿಳಿಸಲಾಗುವುದು ಎಂದರು.