ನವದೆಹಲಿ: ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು ಮತ್ತು ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಒತ್ತಾಯಿಸಿದ್ದಾರೆ.
ಇಂದು ಲೋಕಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಸಂಸದರ ಗದ್ದಲದ ನಡುವೆಯೂ ಕನ್ನಡದಲ್ಲಿ ಮಾತನಾಡಿದ ಯಡಿಯೂರಪ್ಪ, ರೈತರ ಆತ್ಮಹತ್ಯೆ ತಡೆಯುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಅಲ್ಲದೆ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಸಹ ಅನಾವಶ್ಯಕ ಕಾಲಹರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಲೋಕಸಭೆಯಲ್ಲಿ ರೈತರ ಸಮಸ್ಯೆಗಳನ್ನು ಪ್ರಸ್ತಾಪಿಸಿದ ಯಡಿಯೂರಪ್ಪ, ಕರ್ನಾಟಕ ಬರಗಾಲಕ್ಕೆ ತುತ್ತಾಗಿದ್ದು, ಎಲ್ಲಾ ಅಣೆಕಟ್ಟೆಗಳಲ್ಲಿ ನೀರಿ ಸಂಗ್ರಹ ಕಡಿಮೆಯಾಗಿದೆ. ರಾಜ್ಯದಲ್ಲಿ ಬಿತ್ತನೆ ಪ್ರಮಾಣ ಇಳಿಮುಖವಾಗಿದೆ. ಕಳೆದ 1 ತಿಂಗಳಲ್ಲಿ ಮಳೆಯಾಗಿಲ್ಲ. ಇದರಿಂದಾಗಿ ರಾಜ್ಯದ ಶೇ.80 ರೈತರು ಕಂಗಾಲಾಗಿದ್ದಾರೆ. ನಾನು ಮುಖ್ಯಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಕೃಷಿ ಸಾಲವನ್ನು ಮನ್ನಾ ಮಾಡಿದ್ದೆ. ಆದೇ ರೀತಿ ಈಗ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು ಎಂದು ಹೇಳಿದರು.
ಬರದ ಹಿನ್ನೆಲೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ರಾಜ್ಯ ಸರ್ಕಾರಕ್ಕೆ ವಿಶೇಷ ಹಣಕಾಸು ನೆರವು ಘೋಷಣೆ ಮಾಡಿದ್ದಾರೆ. ಈ ಪ್ಯಾಕೇಜ್‍ಗೆ ಶೇ. 75 ರಷ್ಟು ಹಣವನ್ನು ನಾವು ನೀಡುತ್ತೇವೆ. ಶೇ.25 ನೆರವನ್ನು ನೀವು ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೇಳಿದ್ದರೂ ರಾಜ್ಯ ಸರ್ಕಾರ ಮುಂದೆ ಬಂದಿಲ್ಲ. ಇದು ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಎಸಗಿರುವ ದ್ರೋಹ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಇದುವರೆಗೆ 250 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ರಾಜ್ಯ ಸರ್ಕಾರವಾಗಲಿ, ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಆ ಬಗ್ಗೆ ಚಿಂತಿಸುತ್ತಿಲ್ಲ ಎಂದರು.