ಕರ್ನಾಟಕ

ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ವಿ.ಉಮೇಶ್ ನೇಮಕಕ್ಕೆ ಸಿಎಂ ಮೇಲೆ ಹೆಚ್ಚಿದ ಒತ್ತಡ

Pinterest LinkedIn Tumblr

umeshಬೆಂಗಳೂರು, ಡಿ.24- ರಾಜ್ಯ ಸರ್ಕಾರದ  ಮುಖ್ಯಕಾರ್ಯದರ್ಶಿ ಹುದ್ದೆಗೆ  ಹೆಚ್ಚುವರಿ ಮುಖ್ಯಕಾರ್ಯದರ್ಶಿ ವಿ.ಉಮೇಶ್ ಅವರನ್ನು ನೇಮಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೆಚ್ಚಾಗಿದೆ.

ಲಿಂಗಾಯಿತ ಸಮುದಾಯದ ಮುಖಂಡರು ಮುಖ್ಯಮಂತ್ರಿ ಮೇಲಷ್ಟೇ ಅಲ್ಲ, ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ಸಿಂಗ್ ಅವರಿಗೂ ಕೂಡ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಲಿಂಗಾಯಿತ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪವನ್ನು ಮುಖ್ಯಮಂತ್ರಿ ಹಾಗೂ ದಿಗ್ವಿಜಯ್‌ಸಿಂಗ್ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.  ಸೇವಾ ಹಿರಿತನವಿರುವ ಕನ್ನಡಿಗ ಉಮೇಶ್ ಅವರನ್ನು ಮುಖ್ಯಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಬೇಕು ಎಂಬ ಒತ್ತಾಯವನ್ನು  ಪತ್ರದಲ್ಲಿ ಮಾಡಲಾಗಿದೆ.

ಕರ್ನಾಟಕ ವಿಚಾರ ವೇದಿಕೆ, ಅಖಿಲ ಭಾರತ ವೀರಶೈವ ಮಹಾಸಭಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿವೆ.

ಲಿಂಗಾಯಿತ ಸಮುದಾಯದ ಮುಖಂಡರೊಬ್ಬರು ದಿಗ್ವಿಜಯ್‌ಸಿಂಗ್ ಅವರಿಗೆ ಪತ್ರ ಬರೆದು ವಿ.ಉಮೇಶ್ ಅವರನ್ನು ಮುಖ್ಯಕಾರ್ಯದರ್ಶಿ ಹುದ್ದೆಗೆ ಪರಿಗಣಿಸುವಂತೆ ಮುಖ್ಯಮಂತ್ರಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್‌ಗೆ ಅಭ್ಯರ್ಥಿಗಳ ಆಯ್ಕೆ ಮಾಡುವಾಗಲೂ ಲಿಂಗಾಯಿತ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ. ಸಂಪುಟ ವಿಸ್ತರಣೆ ಸಂದರ್ಭದಲ್ಲೂ ಕೂಡ ಲಿಂಗಾಯಿತ ಸಮುದಾಯವನ್ನು ಕಡೆಗಣಿಸಲಾಗಿದೆ. ಅಲ್ಲದೆ, 11ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕದ ಸಂದರ್ಭದಲ್ಲೂ ಕೂಡ ನಮ್ಮ ಸಮುದಾಯವನ್ನು ನಿರ್ಲಕ್ಷಿಸಲಾಗಿದೆ ಎಂದು ಪತ್ರದಲ್ಲಿ ಗಂಭೀರವಾಗಿ ಆರೋಪಿಸಿದ್ದಾರೆ.

ಇದೇ ರೀತಿ ಸರ್ಕಾರ ಕಾಂಗ್ರೆಸ್‌ನಲ್ಲಿ ತಮ್ಮ ಸಮುದಾಯವನ್ನು ಕಡೆಗಣಿಸುವುದು ಮುಂದುವರೆದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಕಷ್ಟವಾಗಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಲಿದ್ದಾರೆ ಎಂಬ ವದಂತಿ ಇದ್ದು, ಇದು ನಿಜವಾದರೆ ರಾಜ್ಯದಲ್ಲಿ ಅವರು ಸಮುದಾಯದ ನಾಯಕರಾಗುವುದರಿಂದ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂಬುದನ್ನೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹೊರ ರಾಜ್ಯದವರಿಗೆ ಮುಖ್ಯಕಾರ್ಯದರ್ಶಿ ಹುದ್ದೆ ನೀಡಲು ಉದ್ದೇಶಿಸಲಾಗಿದೆ ಎಂಬ ವದಂತಿ ದಟ್ಟವಾಗಿದೆ. ಇದು ನಿಜವಾದರೆ ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಪಕ್ಷಕ್ಕೆ ಸಮುದಾಯದ ಸಹಕಾರ ಸೂಕ್ತ ರೀತಿಯಲ್ಲಿ ಸಿಗುವುದಿಲ್ಲ. ಒಂದು ವೇಳೆ ತಮ್ಮ ಸಮುದಾಯಕ್ಕೆ ಸೇರಿದ ಕನ್ನಡಿಗ ವಿ.ಉಮೇಶ್ ಅವರಿಗೆ ಮುಖ್ಯಕಾರ್ಯದರ್ಶಿ ಹುದ್ದೆ ನೀಡಿದರೆ ಸಮುದಾಯದ ವಿಶ್ವಾಸ ಗಳಿಸಲು ನೆರವಾಗಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ವೀರಶೈವ ಮಹಾಸಭಾದ ಅಧ್ಯಕ್ಷ ಎನ್.ತಿಪ್ಪಣ್ಣ ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ರಾಜ್ಯ ಸರ್ಕಾರ ಲಿಂಗಾಯಿತ ಸಮುದಾಯವನ್ನು ಕಡೆಗಣಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ತನಿಖೆ ವಿಳಂಬ, ಉಪಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್ ಬಿ ಅಡಿ ಅವರ ಪದಚ್ಯುತಿ ವಿಚಾರ ತಮ್ಮ ಸಮುದಾಯದ ಅಸಮಾಧಾನಕ್ಕೆ ಕಾರಣವಾಗಿವೆ. ಇದರ ಜತೆಗೆ ಉಮೇಶ್ ಅವರಿಗೆ ಮುಖ್ಯಕಾರ್ಯದರ್ಶಿ ಹುದ್ದೆ ಕೈ ತಪ್ಪಿದರೆ ಅಸಮಾಧಾನ ಇನ್ನಷ್ಟು ಹೆಚ್ಚಾಗಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇದೇ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಿ ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷ ಫಾಲನೇತ್ರ, ಪ್ರಧಾನ ಕಾರ್ಯದರ್ಶಿ ಎಚ್.ಎಂ.ರೇಣುಕಾ ಪ್ರಸನ್ನ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

Write A Comment