ಬೆಂಗಳೂರು: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ.ಜೆ.ಜಾರ್ಜ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜಾರ್ಜ್ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ರಾಜ್ಯಪಾಲರಿಗೆ ಕಳುಹಿಸಲಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.
ಗಣಪತಿ ಅವರು ಆತ್ಮಹತ್ಯೆಗೂ ಮುನ್ನ ತಮ್ಮ ಸಾವಿಗೆ ಸಚಿವ ಕೆ.ಜೆ.ಜಾರ್ಜ್, ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಐಜಿಪಿ ಪ್ರಣವ್ ಮೊಹಾಂತಿ ಅವರು ಕಾರಣ ಎಂದು ಆರೋಪ ಮಾಡಿದ್ದರು.
ಈ ಸಂಬಂಧ ಗಣಪತಿ ಅವರ ಪುತ್ರ ನೇಹಾಲ್ ದಾಖಲಿಸಿದ್ದ ಖಾಸಗಿ ದೂರನ್ನು ಸೋಮವಾರ ವಿಚಾರಣೆ ನಡೆಸಿದ ಮಡಿಕೇರಿಯ ಪ್ರಧಾನ ಸಿವಿಲ್ ನ್ಯಾಯಾಲಯ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿತ್ತು.
ಇದರ ಬೆನ್ನಲ್ಲೇ, ಜಾರ್ಜ್ ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಕಡ್ಡಾಯ ರಜೆ ಕಳುಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಂಸತ್ ಭವನದ ಎದುರು ಧರಣಿ: ಡಿವೈಎಸ್‌ಪಿಗಳಾದ ಎ.ಕೆ.ಗಣಪತಿ ಮತ್ತು ಕಲ್ಲಪ್ಪ ಹಂಡಿಬಾಗ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಸಂಸತ್ ಭವನದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಪಕ್ಷದ ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಸಂಸತ್ ಅಧಿವೇಶನದಲ್ಲಿಯೂ ಈ ವಿಷಯವನ್ನು ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Comments are closed.