ಕರ್ನಾಟಕ

ನಾರಿಮನ್ ಬದಲಾವಣೆ ಸರ್ಕಾರಕ್ಕೆ ಬಿಟ್ಟ ವಿಚಾರ

Pinterest LinkedIn Tumblr

kharge

ಬೆಂಗಳೂರು, ಸೆ. ೯- ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿರುವುದು ನಿಜ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ. ಅದರಲ್ಲಿ ಎರಡು ಮಾತಿಲ್ಲ ಎಂದ ಅವರು, ಪ್ರಜಾಪ್ರಭುತ್ವದಲ್ಲಿ ಸಂವಿಧಾನವನ್ನು ಪಾಲಿಸಬೇಕಾಗುತ್ತದೆ ಎಂದು ಅವರು ತಮಿಳುನಾಡಿಗೆ ನೀರು ಹರಿಸುವ ಸುಪ್ರೀಂ ಕೋರ್ಟಿನ ಆದೇಶವನ್ನು ಪಾಲಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿಗೆ ಮನವಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ ಎಂದು ಅವರು ಹೇಳಿದರು.
ಈ ಹಿಂದೆ ಎಸ್. ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಸುಗ್ರೀವಾಜ್ಞೆ ಮೂಲಕ ನ್ಯಾಯಾಲಯದ ತೀರ್ಪಿಗೆ ಸಡ್ಡು ಹೊಡೆಯಲಾಗಿತ್ತು. ಆದರೆ ಅದನ್ನು ಸುಪ್ರೀಂಕೋರ್ಟ್ ಸರಿ ಅಲ್ಲ ಎಂದು ಹೇಳಿತ್ತು ಎಂಬುದನ್ನು ನೆನಪು ಮಾಡಿಕೊಂಡ ಅವರು, ಎಸ್.ಎಂ. ಕೃಷ್ಣ ಸಿ.ಎಂ. ಆಗಿದ್ದಾಗಲೂ ಕಾವೇರಿ ವಿಚಾರದಲ್ಲಿ ಅನ್ಯಾಯ ಆಗಿತ್ತು ಎಂದು ಖರ್ಗೆ ಹೇಳಿದರು.
ಕಾವೇರಿ ನದಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ವಕೀಲ ನಾರಿಮನ್ ಸಮರ್ಥವಾಗಿ ವಾದ ಮಾಡಿಲ್ಲ. ಅವರನ್ನು ಬದಲಿಸಬೇಕು ಎಂಬ ಆಗ್ರಹಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾರಿಮನ್ ಬದಲಾವಣೆ ವಿಚಾರ ಸರ್ಕಾರಕ್ಕೆ ಬಿಟ್ಟದ್ದು ಎಂದರು.

Comments are closed.