ಕರ್ನಾಟಕ

ಬೆಂಗಳೂರು ಬಿಜೆಪಿ ಕಚೇರಿ ಬಳಿ ಮಹದಾಯಿ ಹೋರಾಟ: ಮನವೊಲಿಸುವಲ್ಲಿ ಬಿಎಸ್ ವೈ ವಿಫಲ

Pinterest LinkedIn Tumblr

ಬೆಂಗಳೂರು: ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿಗೆ ಒತ್ತಾಯಿಸಿ ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಎದುರು ರೈತರು ನಡೆಸುತ್ತಿರುವ ಆಹೋರಾತ್ರಿ ಧರಣಿ ಮಂಗಳವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿನಿರತ ರೈತರ ಮನವೊಲಿಸುವಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ವಿಫಲರಾಗಿದ್ದಾರೆ. ನಡೆಸುತ್ತಿದ್ದು, ಹೋರಾಟದಲ್ಲಿ ಭಾಗವಹಿಸಿದ್ದ ರೈತ ಹನುಮಂತಪ್ಪ ಅವರು ಸೋಮವಾರ ತೀವ್ರ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರ ಮನವೊಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಇಂದು ಸಂಜೆ 5 ಗಂಟೆಗೆ ಪ್ರತಿಭಟನಾ ಸ್ಥಳಕ್ಕೆ ತೆರಳಿ ಧರಣಿ ಕೈಬಿಡುವಂತೆ ಮಹದಾಯಿ ಹೋರಾಟಗಾರರಿಗೆ ಮನವಿ ಮಾಡಿದರು. ಆದರೆ ಯಡಿಯೂರಪ್ಪ ಅವರ ಮಾತಿಗೆ ಬಗ್ಗದ ರೈತರು, ಯಡಿಯೂರಪ್ಪ ವಚನಭ್ರಷ್ಟ, ಮಾತು ತಪ್ಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪತ್ರದಲ್ಲಿ ದಿನಾಂಕ ನಿಗದಿಯಾಗದೇ ಇರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ರೈತ ಸೇನಾ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ರೈತರು ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಯಡಿಯೂರಪ್ಪ ಅವರು ಮಹದಾಯಿ ಹೋರಾಟಗಾರರ ಪ್ರತಿಭಟನೆಯ ಬಿಸಿಯಿಂದ ತಪ್ಪಿಸಿಕೊಳ್ಳಲು ಇಂದು ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಸುವ ಬದಲು ತಮ್ಮ ನಿವಾಸದಲ್ಲಿಯೇ ಕೋರ್ ಕಮಿಟಿ ಸಭೆ ನಡೆಸಿದರು.

ಈ ಮಧ್ಯೆ, ನೀರಾವರಿ ಸಚಿವ ಎಂಬಿ ಪಾಟೀಲ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಮಹದಾಯಿ ಹೋರಾಟಗಾರರನ್ನು ಭೇಟಿಯಾಗಿ ಚರ್ಚಿಸಿದರು.

Comments are closed.