ಬೆಂಗಳೂರು: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯ ಉಸ್ತುವಾರಿ ವಹಿಸುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ. ನಿನ್ನೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ನಡೆದ ಖಾಸಗಿ ಮಾತುಕತೆ ವೇಳೆ ರಾಹುಲ್ ಗಾಂಧಿ, ಸಿದ್ದರಾಮಯ್ಯನವರಿಗೆ ಮುಂಬರುವ ಚುನಾವಣೆಯಲ್ಲಿ ನಿರ್ವಹಿಸಬೇಕಾದ ಪಾತ್ರದ ಬಗ್ಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸುಗಮ ಕಾರ್ಯನಿರ್ವಹಣೆ ಮತ್ತು ಲೋಕಸಭೆ ಚುನಾವಣೆಗೆ ಎರಡೂ ಪಕ್ಷಗಳ ನಡುವೆ ಮೈತ್ರಿಸೂತ್ರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಮುಖ ಪಾತ್ರ ವಹಿಸುವುದು ಮಾತ್ರವಲ್ಲದೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಕೂಡ ಮುಖ್ಯ ತೀರ್ಮಾನ ತೆಗೆದುಕೊಳ್ಳಬೇಕೆಂಬುದು ಕಾಂಗ್ರೆಸ್ ಹೈಕಮಾಂಡ್ ಸೂಚನೆಯಾಗಿದೆ.
ಕಾಂಗ್ರೆಸ್ ಯಾವ ಕ್ಷೇತ್ರದಲ್ಲಿ ಗೆಲ್ಲುವ ಸಾಧ್ಯತೆಗಳು ನಿಚ್ಛಳವಾಗಿದೆ ಎಂದು ಗುರುತಿಸುವಂತೆ ಸಿದ್ದರಾಮಯ್ಯನವರಿಗೆ ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಭಾನುವಾರ ಸಿದ್ದರಾಮಯ್ಯನವರು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದಿದ್ದರು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು. ಸಭೆ ಮುಗಿನ ನಂತರ ನಿನ್ನೆ ರಾಹುಲ್ ಗಾಂಧಿಯವರನ್ನು ಖಾಸಗಿಯಾಗಿ ಭೇಟಿ ಮಾಡಿದ್ದ ಸಿದ್ದರಾಮಯ್ಯ, ರಾಜ್ಯದಲ್ಲಿನ ರಾಜಕೀಯ ಸ್ಥಿತಿಗತಿ ಕುರಿತು ಚರ್ಚೆ ನಡೆಸಿದ್ದಾರೆ. ಈ ಸಮ್ಮಿಶ್ರ ಸರ್ಕಾರ ಉಳಿಯಬೇಕಾದ ಅಗತ್ಯ ಸದ್ಯಕ್ಕೆ ಪಕ್ಷಕ್ಕೆ ಇದ್ದು ಮೈತ್ರಿಗೆ ಧಕ್ಕೆಯುಂಟಾಗಲು ಯಾವುದೇ ಭಿನ್ನಾಭಿಪ್ರಾಯ ಬರದಂತೆ ನೋಡಿಕೊಳ್ಳಬೇಕು ಎಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಷಯದಲ್ಲಿ ಜೆಡಿಎಸ್ ಜೊತೆ ಮಾತನಾಡಲು ಸಿದ್ದರಾಮಯ್ಯನರಿಗೆ ಮಧ್ಯಸ್ಥಿಕೆ ವಹಿಸಲು ರಾಹುಲ್ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ರಾಜ್ಯ ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರು ಇದೀಗ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗುವ ಮೂಲಕ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
Comments are closed.