ಕರ್ನಾಟಕ

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆ; ರಾಜ್ಯದಲ್ಲೂ ಭಾರೀ ಮಳೆಯ ಮುನ್ಸೂಚನೆ

Pinterest LinkedIn Tumblr


ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಒಡಿಶಾ, ಆಂಧ್ರಪ್ರದೇಶದಲ್ಲಿ ಚಂಡಮಾರುತ ಏಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧೆಡೆಯಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ ಮತ್ತು ಆಂಧ್ರಪ್ರದೇಶಗಳಲ್ಲಿ ಅತಿಯಾದ ಮಳೆಯಾಗಲಿದೆ ಎಂದು ತಿಳಿಸಿರುವ ಇಲಾಖೆ ಚಂಡಮಾರುತ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಕಳುಹಿಸಿದೆ.

ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಚಂಡಮಾರುತ ಬೀಸಲಿದೆ. ಅಂಡಮಾನ್​ ದ್ವೀಪದಲ್ಲಿ ಈ ಪ್ರಮಾಣ ಗಂಟೆಗೆ 60 ಕಿ.ಮೀ. ವೇಗದಲ್ಲಿರಲಿದೆ. ಹೀಗಾಗಿ, ಬಂಗಾಳಕೊಲ್ಲಿಯ ಭಾಗದಲ್ಲಿ ಮೀನುಗಾರರು ಸಮುದ್ರದ ಕಡೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಅರಬ್ಬಿ ಸಮುದ್ರದಲ್ಲೂ ಲೂಬಾನ್​ ಎಂಬ ಚಂಡಮಾರುತ ಏಳುವ ಸಾಧ್ಯತೆ ಇರುವುದರಿಂದ ತಮಿಳುನಾಡು, ಕೇರಳ, ಪುದುಚೆರಿ ಮತ್ತು ಲಕ್ಷದ್ವೀಪಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Comments are closed.