ಬೆಂಗಳೂರು: ನಿರೀಕ್ಷೆಯಂತೆಯೇ ರಾಜ್ಯದ ಉಪಚುನಾವಣೆಯ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೇ ಶುರುವಾಗಲಿದೆ. ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಈಗಾಗಲೇ ಸಚಿವಾಕಾಂಕ್ಷಿಗಳಿಗೆ ನೀಡಿರುವ ಮಾತಿನ ಮೇಲೆ ನಿಲ್ಲಲ್ಲು ದೆಹಲಿಯತ್ತ ತೆರಳಿದ್ದಾರೆ. ನವೆಂಬರ್.7 ರಂದು ಅಧಿಕೃತವಾಗಿ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಲು ದೆಹಲಿಯಲ್ಲಿಯೇ ಎರಡು ದಿನಗಳ ಕಾಲ ವಾಸ್ತವ್ಯ ಹೂಡಲಿದ್ದಾರೆ ಎನ್ನುತ್ತಿವೆ ಮೂಲಗಳು.
ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಸಿಎಂ ಕುಮಾರಸ್ವಾಮಿ ಅವರು, ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಅಲ್ಲದೇ ಇತ್ತೀಚೆಗಷ್ಟೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ರಾಜ್ಯ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದರು. ಈ ವೇಳೆ ಸಭೆಯಲ್ಲಿ ಒಮ್ಮತದ ನಿರ್ಧಾರ ಬಾರದ ಹಿನ್ನೆಲೆಯಲ್ಲಿ ಮತ್ತೊಂದು ಹಂತದ ಚರ್ಚೆ ಇದಾಗಲಿದೆ ಎನ್ನಲಾಗುತ್ತಿದೆ.
ಸಭೆಯಲ್ಲಿ ಸಚಿವ ಸ್ಥಾನ, ಖಾತೆ ಹಂಚಿಕೆ ರಾಜ್ಯ ಉಸ್ತುವಾರಿ ನೀಡುವ ಬಗ್ಗೆಯೂ ಸಿಎಂ ಕುಮಾರಸ್ವಾಮಿ ಜತೆಗೆ ರಾಹುಲ್ ಮಹತ್ವದ ಮಾತುಕತೆ ನಡೆಸುವ ಸಾಧ್ಯತೆ ಇದೆ. ಕಳೆದ ಸಭೆಯಲ್ಲಿ ಉಂಟಾದ ಕೆಲ ಗೊಂದಲಗಳನ್ನು ಬಗೆಹರಿಸಿಕೊಂಡು ಒಮ್ಮತದ ನಿರ್ಧಾರಕ್ಕೆ ಬರಲು ರಾಹುಲ್ ಗಾಂಧಿ ಸೂಚಿಸಿದ್ಧಾರೆ. ಹೀಗಾಗಿ ಮತ್ತೊಮ್ಮೆ ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಜಿ ಪರಮೇಶ್ವರ್, ರಾಜ್ಯ ಚುನಾವಣಾ ಉಸ್ತುವಾರಿ ಕೆ ವೇಣುಗೋಪಾಲ್ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ ಸಭೆ ಸೇರುವ ಸಾಧ್ಯತೆ ಹೆಚ್ಚಿದೆ.
ಇತ್ತ ರಾಹುಲ್ ಗಾಂಧಿ ಭೇಟಿಗಾಗಿ ದೆಹಲಿಗೆ ತೆರಳಲು ಎಚ್‍ಡಿಕೆ ಸಿದ್ದರಾಗಿದ್ದಾರೆ. ಆದರೆ, ಈ ಮುನ್ನವೇ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಗೊಂದಲಗಳನ್ನು ಬಗೆಹರಿಸಿಕೊಂಡು ಒಮ್ಮತದ ನಿರ್ಧಾರಕ್ಕೆ ಬರಲು ಒಂದು ಸುತ್ತಿನ ಮಾತುಕತೆ ನಡೆಯಲಿದೆ ಎನ್ನಲಾಗುತ್ತಿದೆ. ಬಳಿಕ ರಾಹುಲ್ ಗಾಂಧಿಯೊಂದಿಗೆ ಅಂತಿಮವಾಗಿ ಚರ್ಚಿಸಲು ತೀರ್ಮಾನಿಸಲಾಗಿದೆ.
ಸಚಿವ ಸಂಪುಟದ ಸರ್ಕಸ್ ಇನ್ನೂ ಒಂದು ವಾರಗಳ ಕಾಲ ಮುಂದುವರೆಯಲಿದೆ. ರಾಹುಲ್ ಗಾಂಧಿಯೇ ಸಚಿವರ ಪಟ್ಟಿ ಅಂತಿಮಗೊಳಿಸಲಿದ್ಧಾರೆ ಎಂಬ ಚರ್ಚೆಯೂ ಕೂಡ ನಡೆಯುತ್ತಿದೆ. ಅಲ್ಲದೇ ಕಾಂಗ್ರೆಸ್ ಮೂಲಗಳ ಪ್ರಕಾರ ಅತೀ ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಹೀಗಾಗಿಯೇ ಸಿಎಂ ಕುಮಾರಸ್ವಾಮಿ ದೆಹಲಿಗೆ ತೆರಳುತ್ತಿದ್ಧಾರೆ ಎಂದಿದ್ದಾರೆ ಕಾಂಗ್ರೆಸ್ ವಕ್ತಾರರು.
Comments are closed.