ಕರ್ನಾಟಕ

ಸುಳ್ಳು ಸುದ್ದಿಗಳನ್ನು ನಂಬಬೇಡಿ…ಮಂಡ್ಯ ಕ್ಷೇತ್ರದಿಂದ ಹಿಂದೆ ಸರಿಯಲ್ಲ: ಸುಮಲತಾ

Pinterest LinkedIn Tumblr


ಮಂಡ್ಯ: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುವ ಮುನ್ನವೇ ಚುನಾವಣಾ ಅಖಾಡ ರಂಗೇರತೊಡಗಿದೆ. ಮತ್ತೊಂದೆಡೆ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ತನ್ನ ಸ್ಪರ್ಧೆ ಖಚಿತ, ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರು ಹಿಂದೆ ಸರಿಯಲಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಸುದ್ದಿಯ ಬಗ್ಗೆ ಪತ್ರಕರ್ತರು ಮಂಗಳವಾರ ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ಅವರು, ನನ್ನ ವಿರುದ್ಧ ವದಂತಿಯನ್ನು ಹಬ್ಬಿಸುತ್ತಿದ್ದಾರೆ. ಇದನ್ನು ಯಾರೂ ನಂಬಬೇಡಿ. ನಾನು ಕಣದಿಂದ ಹಿಂದೆ ಸರಿಯುವುದಿಲ್ಲ ಎಂದರು.

ಇನ್ನೂ ಸಾಕಷ್ಟು ಸಮಯವಿದೆ. ಕಾದು ನೋಡಿ. ಮಾರ್ಚ್ 18ರಂದು ತನ್ನ ಸ್ಪಷ್ಟ ನಿಲುವನ್ನು ಪ್ರಕಟಿಸುವುದಾಗಿ ಸುಮಲತಾ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಟಿಕೆಟ್ ಕೈತಪ್ಪಿದರೂ ಕೂಡಾ, ಪಕ್ಷೇತರರಾಗಿ ಕಣಕ್ಕಿಳಿಯುವುದು ನಿಶ್ಚಿತ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲು ಸಿದ್ಧತೆ ನಡೆಸಲಾಗಿದೆ. ಕಾಂಗ್ರೆಸ್, ಜೆಡಿಎಸ್ ನಡುವೆ ಸೀಟು ಹಂಚಿಕೆ ಅಂತಿಮವಾಗದೆ ಕಗ್ಗಂಟಾಗಿ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜೆಡಿಎಸ್ ಕ್ಷೇತ್ರಕ್ಕೆ ಎಂದು ಸಿದ್ದರಾಮಯ್ಯ ಅವರು ಈಗಾಗಲೇ ಘೋಷಿಸಿದ್ದರು. ಸುಮಲತಾಗೂ ಕಾಂಗ್ರೆಸ್ ನಿಂದ ಟಿಕೆಟ್ ಇಲ್ಲ ಎಂಬುದಾಗಿ ತಿಳಿಸಿದ್ದರು. ಈ ನಿಟ್ಟಿನಲ್ಲಿ ಸುಮಲತಾ ಪಕ್ಷೇತರರಾಗಿ ಕಣಕ್ಕಿಳಿಯುತ್ತಾರಾ ಅಥವಾ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಲಿದೆಯೋ ಎಂಬ ಬಗ್ಗೆ ಇನ್ನಷ್ಟೇ ಸ್ಪಷ್ಟ ಚಿತ್ರಣ ಸಿಗಬೇಕಾಗಿದೆ.

Comments are closed.