ಬೆಂಗಳೂರು: ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಏಳು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ತಜ್ಞವೈದ್ಯರ ತಂಡ ಚಿಕಿತ್ಸೆ ನೀಡುವಲ್ಲಿ ನಿರತವಾಗಿದೆ.
ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದೊಂದು ವಾರದಿಂದ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಉಸಿರಾಟದ ಸಮಸ್ಯೆ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ನ್ಯೂಸ್18ಗೆ ತಿಳಿಸಿವೆ. ಮೂಲಗಳ ಪ್ರಕಾರ ಸುಮಾರು ಒಂದು ವರ್ಷದಿಂದ ಮೂತ್ರಪಿಂಡ ವಿಫಲವಾಗಿದ್ದು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಆದರೆ ಈಗ ಹಿಂದೆಂಗಿಂತಲೂ ಅವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ.
ಮುಂದಿನ ಚಿಕಿತ್ಸೆ ಕುರಿತಂತೆ ತೀರ್ಮಾನ ಕೈಗೊಳ್ಳಲು ರಾಜಾಜಿನಗರದಲ್ಲಿರುವ ಬಸವ ಮಂಟಪದಲ್ಲಿ ಸಭೆ ಸೇರಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ. ಗೃಹ ಸಚಿವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಶೀಘ್ರದಲ್ಲೇ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಯ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಮಾತೆ ಮಹಾದೇವಿ, ದೆಹಲಿಯಲ್ಲೂ ಪ್ರತಿಭಟನೆ ಮಾಡಿದ್ದರು. ಜತೆಗೆ ಲಿಂಗಾಯತ ಪ್ರತ್ಯೇಕ ಧರ್ಮ ಆಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ ಎಂಬ ಶಪಥ ಮಾಡಿದ್ದರು.
Comments are closed.