ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಯ ಎಲ್ಲ ಮಕ್ಕಳಿಗೂ ‘ಕರ್ನಾಟಕ ದರ್ಶನ’ ಯೋಜನೆಯಡಿ ಪ್ರವಾಸಕ್ಕೆ ಅವಕಾಶ ಕಲ್ಪಿಸಿಕೊಡಲು ತೀರ್ಮಾನಿಸಲಾಗಿದೆ.
ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಬುಧವಾರದಂದು ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿ, ಸರ್ಕಾರಿ ಶಾಲೆಯ ಎಲ್ಲ ಮಕ್ಕಳಿಗೂ ಪ್ರವಾಸ ಕಲ್ಪಿಸಲು ಚಿಂತನೆ ನಡೆದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರು ಮುಂದಿನ ಬಜೆಟ್ ನಲ್ಲಿ ಈ ಕುರಿತು ಘೋಷಣೆ ಮಾಡಲಿದ್ದಾರೆ ಎಂದು ಹೇಳಿದರು.
ಈ ಹಿಂದೆ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಮಕ್ಕಳಲ್ಲಿ ತಾರತಮ್ಯ ಭಾವನೆ ಬಾರದಿರಲಿ ಎಂಬ ಕಾರಣಕ್ಕೆ ಇನ್ನು ಮುಂದೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಮಕ್ಕಳಿಗೂ ಪ್ರವಾಸಕ್ಕೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Comments are closed.