ಬೆಂಗಳೂರು: ಪೌರತ್ವ ಮಸೂದೆ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ‘ಸರ್ಕಾರದ ಪ್ರಾಯೋಜಕತ್ವದ ಘಟನೆ’ ಎಂದು ಹೇಳಿ ಆರೋಪ ಮಾಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, “ಮಂಗಳೂರಿನ ಗೋಲಿಬಾರ್ನಲ್ಲಿ ಮೃತಪಟ್ಟವರಿಬ್ಬರು ಅಮಾಯಕರು. ಕೇಂದ್ರದ ದಬ್ಬಾಳಿಕೆ ನೀತಿಯೇ ಘಟನೆಗೆ ಕಾರಣ. ಇದು ಸರ್ಕಾರದ ಪ್ರಾಯೋಜಕತ್ವ ಘಟನೆ. ಇಷ್ಟು ತುರ್ತಾಗಿ ಗೋಲಿಬಾರ್ ಮಾಡಿರುವ ಘಟನೆ ರಾಜ್ಯದ ಇತಿಹಾಸದಲ್ಲೇ ಇಲ್ಲ” ಎಂದು ಆರೋಪಿಸಿದರು.
ಮುಂದುವರೆದ ಅವರು, “ಕಾಂಗ್ರೆಸ್ ಪಕ್ಷ ಪ್ರತಿಭಟನೆಯಲ್ಲಿ ಪಾಲ್ಗೊಂಡಿಲ್ಲ. ಸಾವಿನ ಹೊಣೆಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪನವರೇ ಹೊರಬೇಕು. ಮುಖ್ಯಮಂತ್ರಿ ಈಗಾಗಲೇ ಪೋಲಿಸರಿಗೆ ಶಬ್ಬಾಸ್ ಗಿರಿ ಕೊಟ್ಟಿದ್ದಾರೆ. ಇದರಿಂದ ಸಿಐಡಿ ತನಿಖೆಯ ಮೇಲೆ ನಂಬಿಕೆಯಿಲ್ಲ. ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕಿದೆ,” ಎಂದು ಆಗ್ರಹ ಮಾಡಿದರು.
ಪೌರತ್ವ ತಿದ್ದುಪಡಿ ಮಸೂದೆ ಕಾಯ್ದೆ ವಿರೋಧಿಸಿ ಡಿ.19ರಂದು ರಾಜ್ಯಾದ್ಯಂತ ಪ್ರತಿಭಟನೆಗಳು ಶುರುವಾಗಿದ್ದವು. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಈ ವೇಳೆ ಮಂಗಳೂರಿನಲ್ಲಿ ಪ್ರತಿಭಟನೆಯ ಕಾವು ಜೋರಾಗಿ ಪೊಲೀಸರ ಗೋಲಿಬಾರ್ಗೆ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದರು. ಬಳಿಕ ಅಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕರ್ಫ್ಯೂ ಜಾರಿ ಮಾಡಿ, 48 ಗಂಟೆಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ನಗರದಲ್ಲಿ ಇನ್ನೂ ಸಹ ನಿಷೇಧಾಜ್ಞೆ ಜಾರಿಯಲ್ಲಿದ್ದು, ಆಯಕಟ್ಟಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಮಂಗಳೂರು ಹಿಂಸಾಚಾರ ಕುರಿತು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಈ ಪ್ರಕರಣ ಕುರಿತು ನ್ಯಾಯಾಂಗ ತನಿಖೆಯಾಗಲೇಬೇಕು ಎಂದು ಆಗ್ರಹಿಸಿದ್ದಾರೆ.
Comments are closed.