ಬೆಂಗಳೂರು: ನೂತನ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ರಾಜ್ಯದ ಮುಸ್ಲಿಂ ಮಹಿಳೆಯರು ಸಿಡಿದೆದಿದ್ದು, ಬೆಂಗಳೂರು, ಶಿವಮೊಗ್ಗ, ಕಲಬುರಗಿ ಮತ್ತಿತರ ಕಡೆಗಳಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ, ಬ್ಯಾನರ್ ಹಾಗೂ ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಮಹಿಳೆಯರು, ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ಟೌನ್ ಹಾಲ್ ಮುಂಭಾಗ ನಡೆದ ಇದೇ ರೀತಿಯ ಪ್ರತಿಭಟನೆಯಲ್ಲಿ ಅಧಿಕ ಸಂಖ್ಯೆಯ ಮಹಿಳೆಯರು ಪಾಲ್ಗೊಂಡಿದ್ದರು.
ಕಲಬುರಗಿಯಲ್ಲಿ ಜಗತ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಸಿಎಎ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮೈಸೂರು, ಬಾಗಲಕೋಟೆ, ಧಾರವಾಡ ಮತ್ತಿತರ ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಯಿತು.
ಧಾರವಾಡದಲ್ಲಿ ಪ್ರಗತಿಪರ ಸಂಘಟನೆಗಳು ಆಯೋಜಿಸಿದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಪಾಲ್ಗೊಂಡಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಂಡಿದ್ದರು.
ಮೈಸೂರಿನ ಟೌನ್ ಹಾಲ್ ಮೈದಾನದಲ್ಲಿ ಬಿಗಿ ಭದ್ರತೆ ನಡುವೆ ನಡೆದ ಪ್ರತಿಭಟನೆಯಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬಾಗಲಕೋಟೆಯಲ್ಲಿ ವಿವಿಧ ಪ್ರಗತಿಪರ ಸಂಘಟನೆ ಹಾಗೂ ಮುಸ್ಲಿಂ ಸಂಘಟನೆಗಳಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಜಾಥಾ ನಡೆಸಲಾಯಿತು.
Comments are closed.