ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಹ ಚುನಾವಣಾಧಿಕಾರಿಯಾದ ರಾಜ್ಯ ಅಧ್ಯಕ್ಷರ ಆಯ್ಕೆ ಚುನಾವಣಾ ವೀಕ್ಷಕ ಸಿ.ಟಿ.ರವಿ ಘೋಷಿಸಿದರು. ನೂತನ ಅಧ್ಯಕ್ಷರ ಅಧಿಕಾರಾವಧಿ 2023ರ ಜನವರಿ 16ಕ್ಕೆ ಮುಕ್ತಾಯವಾಗಲಿದೆ.
ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಅಧ್ಯಕ್ಷನಾಗಿ ಆಯ್ಕೆಯಾದಾಗ ಕೆಲ ಸವಾಲುಗಳಿದ್ದವು. ರಾಜ್ಯಾದ್ಯಂತ ಪ್ರವಾಸ ಮಾಡಿ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದ್ದೇನೆ. ಸ್ಥಳೀಯ ಸಂಸ್ಥೆಯ ಚುನಾವಣೆ, ಬಿಬಿಎಂಪಿ ಮೇಯರ್ ಚುನಾವಣೆ ಹಾಗೂ ಉಪಚುನಾವಣೆಯಲ್ಲಿ ಯಶಸ್ಸು ಗಳಿಸಿದ್ದೇವೆ.
ಕಾರ್ಯಕರ್ತರ ನಿರೀಕ್ಷೆಯಂತೆ ಕಾರ್ಯ ನಿರ್ವಹಿಸುತ್ತಿದ್ದೇನೆ. ಯಡಿಯೂರಪ್ಪ ಸಲಹೆ, ಹಿರಿಯರ ಮಾರ್ಗದರ್ಶನ ಪಡೆದು ಮುಂದುವರಿಯುತ್ತೇನೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ 150 ಸ್ಥಾನ ಗೆಲ್ಲುವ ಗುರಿ ಇದೆ ಎಂದು ಹೇಳಿದರು.
Comments are closed.