ಬೆಂಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 59 ಮಂದಿಯನ್ನು ಬಂಧಿಸಲಾಗಿದ್ದು, 5 ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 59 ಮಂದಿಯನ್ನು ಬಂಧಿಸಲಾಗಿದೆ. ಘಟನೆಯಾದ 3-4 ಗಂಟೆಯಲ್ಲಿ ಎಲ್ಲಾ ಪ್ರಮುಖರನ್ನ ಅರೆಸ್ಟ್ ಮಾಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಂಬಂಧ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇಂತಹ ಕೃತ್ಯಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ. ಇನ್ನೂ ಕಾರ್ಯಾಚರಣೆ ಮುಂದುವರೆದಿದ್ದು, ಎಲ್ಲರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಸ್ತುತ ನಾನು ಘಟನೆ ನಡೆದ ಪಾದರಾಯನ ಪುರಕ್ಕೆ ತೆರಳುತ್ತಿದ್ದು, ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಇತ್ತ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಗೃಹ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಪೊಲೀಸರು, ವೈದ್ಯರು ಮತ್ತು ಆಶಾಕಾರ್ಯಕರ್ತೆಯರ ವಿರುದ್ಧ ಹಲ್ಲೆ ಮಾಡಿದ್ದ ಪುಂಡರ ವಿರುದ್ಧ ಇದೀಗ ಪೊಲೀಸರು ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಐಪಿಸಿ ಸೆಕ್ಷನ್ 353, 307, ಎನ್ ಡಿಎಂಎ 353, 332, 354, 201ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಒಟ್ಟಾರೆ ಸುಮಾರು 60 ಮಂದಿಯನ್ನು ಬಂಧಿಸಿದ್ದಾರೆ. ಇನ್ನು ಗಲಾಟೆ ವೇಳೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಅನ್ನು ಎಳೆದು ಬಿಸಾಕಿದ್ದ ಓರ್ವ ಮಹಿಳೆಯನ್ನೂ ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಮಹಿಳೆಯನ್ನು ಫರೋಜಾ ಅಲಿಯಾಸ್ ಲೇಡಿಡಾನ್ ಎಂದು ಗುರುತಿಸಲಾಗಿದ್ದು, ಈ ಹಿಂದೆ ಇದೇ ಮಹಿಳೆ ಗಾಂಜಾ ಮಾರಾಟ ಮಾಡಿ ಪೊಲೀಸರ ಅತಿಥಿಯಾಗಿದ್ದಳು ಎನ್ನಲಾಗಿದೆ. ಈಕೆಯೇ ಗಲಾಟೆಗಾಗಿ ಹುಡುಗರನ್ನು ಕರೆಸಿದ್ದಾಳೆ ಎಂಬ ಮಾಹಿತಿ ಇದೆ. ಹೀಗಾಗಿ ಆಕೆಯನ್ನೂ ಬಂಧಿಸಲಾಗಿದೆ. ಅಲ್ಲದೆ ಆಕೆ ನೀಡಿರುವ ಮಾಹಿತಿ ಮೇರೆಗೆ 20ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೆಂದು ಮುಖರ್ಜಿ ಹೇಳಿದ್ದಾರೆ.
Comments are closed.