ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಸದ್ಯ ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ . ತಮ್ಮ ಗೃಹ ಕಚೇರಿ ಹಾಗೂ ಸರ್ಕಾರಿ ನಿವಾಸದ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಕಾವೇರಿ ನಿವಾಸದಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ. ಈ ಸಂದರ್ಭದಲ್ಲಿ ಕಾಲ ಕಳೆಯಲು ವಿ.ಎಸ್ ಖಾಂಡೇಕರ್ ಅವರ ಯಯಾತಿ ಪುಸ್ತಕದ ಮೊರೆ ಹೋಗಿದ್ದಾರೆ.
ಭಾನುವಾರ ಬೆಳಗ್ಗೆ ಕೊರೊನಾ ಸಂಬಂಧಿಸಿದ ಸಭೆಗಳನ್ನು ನಡೆಸಿದ ಬಳಿಕ ಮಧ್ಯಾಹ್ಮದ ಹೊತ್ತಿನಲ್ಲಿ ಮರಾಠಿ ಲೇಖಕ ವಿ.ಎಸ್ ಖಾಂಡೇಕರ್ ಅವರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕಾದಂಬರಿ ಯಯಾತಿ ಕನ್ನಡಾನುವಾದ ಪುಸ್ತಕವನ್ನು ಕೈಗೆತ್ತಿಕೊಂಡಿದ್ದಾರೆ. ವಿ.ಎಂ.ಇನಾಂದಾರ್ ಅವರು ಈ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಪುಸ್ತಕ ಓದುತ್ತಿರುವ ಫೋಟೋವನ್ನು ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.
“ಬಿಡುವಿನ ವೇಳೆಯಲ್ಲಿ ನನಗೆ ಅತ್ಯಂತ ಪ್ರಿಯವಾದ ಕಾಲಕ್ಷೇಪವೆಂದರೆ ಓದುವುದು. ನೂರಾರು ಸಂಗತಿಗಳ ಬಗ್ಗೆ ತಿಳಿದಷ್ಟೂ ತಿಳಿಯಬಹುದಾದ ವಿಷಯಗಳಿವೆ, ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ. ಇಂದಿನ ಭಾನುವಾರದ ಲಾಕ್ ಡೌನ್ ಮತ್ತು ಸ್ವ-ಕ್ವಾರಂಟೈನ್ ನಲ್ಲಿರುವ ವೇಳೆ ಸಿಕ್ಕ ಸ್ವಲ್ಪ ಬಿಡುವಿನ ಸಮಯವನ್ನು ಖಾಂಡೇಕರ್ ಅವರ ಯಯಾತಿಯ ಜೊತೆಗೆ ಕಳೆಯುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾ ಹಾಗೂ ಸರ್ಕಾರಿ ನಿವಾಸ ಕಾವೇರಿಯ ಒಟ್ಟು 10 ಮಂದಿ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮುಂಜಾಗರೂಕತಾ ಕ್ರಮವಾಗಿ ಸ್ವಯಂ ನಿರ್ಬಂಧಕ್ಕೆ ಒಳಗಾಗಿದ್ದಾರೆ.
Comments are closed.